ಗದಗ:ಕನ್ನಡ ಚಿತ್ರರಂಗದ ನಟ ರಾಕಿಂಗ್ ಸ್ಟಾರ್ ಯಶ್ ಜನ್ಮದಿನದ ಹಿನ್ನೆಲೆ ಹುಟ್ಟಹಬ್ಬದ ಶುಭಾಶಯ ಕೋರುವ ಬ್ಯಾನರ್ ಕಟ್ಟುವಾಗ ವಿದ್ಯುತ್ ಪ್ರವಹಿಸಿ ಮೂವರು ಅಭಿಮಾನಿಗಳು ಮೃತಪಟ್ಟ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದಿದೆ.
ಹನಮಂತ ಮಜ್ಜುರಪ್ಪ ಹರಿಜನ (21),ಮುರಳಿ ನೀಲಪ್ಪ ನಡವಿನಮನಿ (20) ಹಾಗೂ ನವೀನ್ ಗಾಜಿ (19) ಮೃತ ಯುವಕರು ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮಂಜುನಾಥ್ ಹರಿಜನ,ದೀಪಕ ಹರಿಜನ,ಪ್ರಕಾಶ ಮ್ಯಾಗೇರಿ ಎಂಬುವ ಮೂವರಿಗೆ ಗಂಭೀರ ಗಾಯಗಳಾಗಿವೆ.
ನೆಚ್ಚಿನ ನಟನ ಹುಟ್ಟುಹಬ್ಬವನ್ನು ಗ್ರಾಮದಲ್ಲಿ ಭರ್ಜರಿಯಾಗಿ ಆಚರಿಸಬೇಕೆಂದು ರವಿವಾರ ತಡರಾತ್ರಿ ಬ್ಯಾನರ್ ಕಟ್ಟುವ ವೇಳೆ ಈ ದುರ್ಘಟನೆ ನಡೆದಿದೆ. ಗ್ರಾಮದಲ್ಲಿ ಸೂತಕದ ಛಾಯೆ ಆವರಿಸಿದೆ. ಘಟನೆಯಲ್ಲಿ ಗಾಯಗೊಂಡ ಮೂವರಿಗೆ ಚಿಕಿತ್ಸೆ ಮುಂದುವರೆದಿದೆ.ಯುವಕರಿಗೆ ವಿದ್ಯುತ್ ತಗುಲಿದ ಯುವಕರ ಕೂಗಾಟ ಚೀರಾಟದ ಲೈವ್ ವಿಡಿಯೋ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ವರದಿ:ರಾಹುಲ್ ಮಡಿವಾಳರ