ಕಲಬುರಗಿ:ಹುಬ್ಬಳ್ಳಿಯ ವೀರಾಪುರ ಓಣಿಯ ಅಂಜಲಿ ಅಂಬಿಗೇರ ಯುವತಿಯ ಹತ್ಯೆಗೈದ ಯುವಕನನ್ನು ತಕ್ಷಣವೇ ಬಂಧಿಸಿ ಆರೋಪಿಗೆ ಗಲ್ಲುಶಿಕ್ಷೆ ವಿಧಿಸುವಂತೆ ಮಹಾಗಾಂವ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಮರತೂರಕರ್ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು,ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ ಹತ್ಯೆ ಘಟನೆ ಮಾಸುವ ಮುನ್ನವೇ ಮತ್ತೊಂದು ಘಟನೆ ಸಂಭವಿಸಿದ್ದು ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದ್ದು,ಕಾಂಗ್ರೆಸ್ ಸರಕಾರ ಕಾನೂನು ಹಾಗೂ ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿದೆ.ಕಾಂಗ್ರೆಸ ಸರಕಾರದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ.
ಅಂಜಲಿ ಅಂಬಿಗೇರ ಯುವತಿಯನ್ನು ಪಕ್ಕದ ಏರಿಯಾದ ನಿವಾಸಿ ಗಿರೀಶ ಎಂಬಾತ ಪ್ರೀತಿಸುವಂತೆ ದುಂಬಾಲು ಬಿದ್ದಿದ್ದ ಪ್ರೀತಿ ನಿರಾಕರಿಸಿದ್ದಕ್ಕಾಗಿ ಬುಧುವಾರದಂದು ಬೆಳಿಗ್ಗೆ ಯುವತಿಯ ಮನೆಗೆ ಹೋಗಿ ಆಕೆಯನ್ನು ಭೀಕರವಾಗಿ ಹತ್ಯೆಗೈದಿರುವ ಘಟನೆ ಅಮಾನವೀಯ.ಇಂತಹ ಘಟನೆಗಳು ಹೆಚ್ಚು ಹೆಚ್ಚು ಆಗುತ್ತಿರುವ ಹಿನ್ನಲೆಯಲ್ಲಿ ಕೊಲೆ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವ ಮೂಲಕ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸ್ಥಾಪಿಸಲು ರಾಜ್ಯ ಕಾಂಗ್ರೆಸ ಸರಕಾರ ಮುಂದಾಗಬೇಕು ಮತ್ತು ಯುವತಿಯ ಕುಟುಂಬಕ್ಕೆ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ.
