ಸೊರಬ:ಪುರಾಣ ಪ್ರಸಿದ್ಧ ಹಾಗೂ ಐತಿಹಾಸಿಕ ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಾಲಯದಲ್ಲಿ ಕಾರ ಹುಣ್ಣಿಮೆ ಅಂಗವಾಗಿ ವಿಶೇಷ ಪೂಜಾ ಕೈಂಕರ್ಯಗಳು ನಡೆದವು.
ದೇವಸ್ಥಾನಕ್ಕೆ ಕಾರ ಹುಣ್ಣಿಮೆ ಪ್ರಯುಕ್ತ ಸಾವಿರಾರು ಭಕ್ತರು ಆಗಮಿಸಿ ಶ್ರದ್ಧಾಭಕ್ತಿಯಿಂದ ವಿಶೇಷ ಪೂಜೆ ಸಲ್ಲಿಸಿದರು.ಶಿಕಾರಿಪುರ,ಹಿರೇಕೆರೂರು, ಹಾನಗಲ್, ಬ್ಯಾಡಗಿ, ರಾಣೇಬೆನ್ನೂರು, ದಾವಣಗೆರೆ, ಹರಿಹರ, ಬಾಗಲಕೋಟೆ,ಹುಬ್ಬಳ್ಳಿ, ಧಾರವಾಡ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಭಕ್ತರು ಆಗಮಿಸಿ ಆರಾಧ್ಯ ದೇವಿ ರೇಣುಕಾoಬೆಯ ದರ್ಶನ ಪಡೆದರು.
ರೇಣುಕಾ ತಾಯಿ ನಿನ್ನ ಆಲಯಕ್ಕೆ ಉದೋ ಉದೋ* ಎಂಬ ಉದ್ಘೋಷದೊಂದಿಗೆ ಭಕ್ತಿ ಸಮರ್ಪಿಸಿದರು. ಪರಿವಾರ ದೇವರುಗಳಾದ ನಾಗದೇವತೆ, ಮಾತಂಗಿ, ಕಾಲಭೈರವ, ಪರಶುರಾಮ ಶೂಲದ ಬೀರಪ್ಪ ದೇವರಿಗೆ ಹಾಗೂ ತೊಟ್ಟಿಲು ಬಾವಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ದೇವರ ಹೆಸರಿನಲ್ಲಿ ಭಕ್ತರು ಧಾರ್ಮಿಕ ಪೂಜಾ ವಿಧಿ ವಿಧಾನಗಳಾದ ಪಡ್ಲಿಗೆ ತುಂಬಿಸುವುದು, ಮುಡಿ ನೀಡುವುದು, ಕಿವಿ ಚುಚ್ಚಿಸುವುದು, ವಿವಿಧ ಸೇವೆ ಮುಂತಾದವುಗಳನ್ನು ಆಚರಿಸಿದರು. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ ಹಿನ್ನೆಲೆಯಲ್ಲಿ ಮುಖ್ಯ ರಸ್ತೆಯಲ್ಲಿ ಟ್ರಾಫಿಕ್ ಸಮಸ್ಯೆಯಿಂದ ಕೆಲ ಕಾಲ ಸಂಚಾರಕ್ಕೆ ತೊಡಕಾಗಿತ್ತು.
-ಸಂದೀಪ ಯು.ಎಲ್, ಸೊರಬ