ಶಿವಮೊಗ್ಗ : ರಾಷ್ಟ್ರೀಯ ಪರೀಕ್ಷೆ ಸಮಿತಿ ವತಿಯಿಂದ ಜ.03 ರಿಂದ 16 ರವರೆಗೆ ಯುಜಿಸಿ ನೆಟ್ ಮತ್ತು ಜೆಇಇ ಪರೀಕ್ಷೆಗಳು ಐಓಎನ್ ಡಿಜಿಟಲ್ ಝೋನರ್, ಐಡಿಝಡ್, ಮಾಚೇನಹಳ್ಳಿ ಪರೀಕ್ಷಾ ಕೇಂದ್ರದಲ್ಲಿ ನಡೆಯಲಿದ್ದು, ವ್ಯವಸ್ಥಿತವಾಗಿ ಪರೀಕ್ಷೆಗಳನ್ನು ನಡೆಸಲು ಅವಶ್ಯಕವಾದ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪರೀಕ್ಷೆ ಸಂಬ೦ಧ ಅಧಿಕಾರಿಗಳಿಗೆ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ಪರೀಕ್ಷೆಗಳು ಪಾರದರ್ಶಕವಾಗಿ, ಶಾಂತ ರೀತಿಯಲ್ಲಿ ನಡೆಯಲು ಅಗತ್ಯವಾದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆಗಳನ್ನು ನೀಡಿದರು.
ಪರೀಕ್ಷೆಗಳು ಪಾರದರ್ಶಕವಾಗಿ, ಶಾಂತ ರೀತಿಯಲ್ಲಿ ನಡೆಯಲು ಅಗತ್ಯ ಮುಂಜಾಗ್ರತಾ ಕ್ರಮವಾಗಿ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀ ವ್ಯಾಪ್ತಿ ಪ್ರದೇಶದಲ್ಲಿ ಪರೀಕ್ಷಾ ದಿನಾಂಕಗಳoದು ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ಜಿಲ್ಲಾಧಿಕಾರಿಗಳು ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ.
ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಬಂದೋಬಸ್ತ್ ನೀಡುವ ಕುರಿತು ಪೊಲೀಸ್ ಅಧೀಕ್ಷಕರಿಗೆ ಪತ್ರ ಬರೆಯಲಾಗಿದೆ ಎಂದರು.
ಪರೀಕ್ಷಾ ಕೇಂದ್ರದೊಳಗೆ ಮೊಬೈಲ್ ಮತ್ತು ಯಾವುದೇ ರೀತಿಯ ಎಲೆಕ್ಟ್ರಾನಿಕ್ ವಸ್ತುಗಳಿಗೆ ಅವಕಾಶವಿರುವುದಿಲ್ಲ ಎಂದು ತಿಳಿಸಿದ ಅವರು ಪರೀಕ್ಷಾ ವೇಳೆ ಮಾರ್ಗಾಧಿಕಾರಿಗಳು, ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಮತ್ತು ವೀಕ್ಷಕರು ಮಾರ್ಗಸೂಚಿಯನ್ವಯ ತಮ್ಮ ತಮ್ಮ ಕರ್ತವ್ಯವನ್ನು ಕಟ್ಟುನಿಟ್ಟಾಗಿ ನಿರ್ವಹಿಸಬೇಕು.
ಪರೀಕ್ಷಾ ಮುನ್ನ ಸಂಬಂಧಿಸಿದ ಅಧಿಕಾರಿಗಳು ಪರೀಕ್ಷಾ ಕೇಂದ್ರಕ್ಕೆ ತೆರಳಿ, ಸೂಕ್ತ ರೀತಿಯ ಆಸನ ವ್ಯವಸ್ಥೆ, ಕುಡಿಯುವ ನೀರು ಸೇರಿದಂತೆ ಮೂಲಭೂತ ವ್ಯವಸ್ಥೆಗಳ ಕುರಿತು ಪರಿಶೀಲನೆ ನಡೆಸಿ, ವ್ಯವಸ್ಥಿತ ಮತ್ತು ಯಶಸ್ವಿ ಪರೀಕ್ಷೆಗೆ ಅಗತ್ಯವಾದ ಎಲ್ಲ ಪೂರ್ವ ತಯಾರಿ ಮತ್ತು ಸಿದ್ದತೆಗಳನ್ನು ಮಾಡಿಕೊಳ್ಳಬೇಕು ಎಂದು ಅವರು ಸೂಚನೆ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ, ಪೋಲಿಸ್ ಉಪ ಅಧೀಕ್ಷಕರಾದ ಕಾರ್ಯಪ್ಪ, ಜಿಲ್ಲಾ ಸೂಚನಾ ವಿಜ್ಞಾನ ಅಧಿಕಾರಿ ವೆಂಕಟೇಶ್ , ಐಓಎನ್ ಡಿಜಿಟಲ್ ಝೋನರ್, ಐಡಿಝಡ್, ಮಾಚೇನಹಳ್ಳಿ ವ್ಯವಸ್ಥಾಪಕರು ಉಪಸ್ಥಿತರಿದ್ದರು.
ವರದಿ : ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ
