
ಬೆಂಗಳೂರು: ನೆಲಮಂಗಲದಲ್ಲಿ ಹಿಟ್ ಆ್ಯಂಡ್ ರನ್ ಘಟನೆಗೆ ಬೈಕ್ ಸವಾರನೊಬ್ಬನು ಅಸುನೀಗಿದ್ದು ಟಿಟಿ ವಾಹನದ ಹೊಡೆತಕ್ಕೆ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನೆಲಮಂಗಲದ ದಾನೋಜಿಪಾಳ್ಯ ಬಳಿಯ ಮನೋಜ್ ಡಾಬಾ ಬಳಿ ಸಂಭವಿಸಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ ಅಪಘಾತವು ನೆಲಮಂಗಲ – ತುಮಕೂರು ರಾಷ್ಟ್ರೀಯ ಹೆದ್ದಾರಿಯ ಸರ್ವೀಸ್ ರಸ್ತೆಯಲ್ಲಿ ಸಂಭವಿಸಿದ್ದು, ಬೈಕ್‌ನಲ್ಲಿ ಸಾಗುತ್ತಿದ್ದ ವ್ಯಕ್ತಿಗೆ ಟಿಟಿ ಗಾಡಿ ಡಿಕ್ಕಿ ಹೊಡೆದ ಪರಿಣಾಮ, ಬೈಕ್ ಸವಾರ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಅಪಘಾತ ಸಂಭವಿಸಿದ ಬಳಿಕ ಟಿಟಿ ವಾಹನದ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂಬ ಮಾಹಿತಿ ದೊರೆತಿದೆ. ಸದ್ಯ ನೆಲಮಂಗಲ ಟ್ರಾಫಿಕ್ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತದ ಸಾಕ್ಷ್ಯಗಳನ್ನು ಸಂಗ್ರಹಿಸುವಲ್ಲಿ ತೊಡಗಿದ್ದಾರೆ.
ಮೃತ ವ್ಯಕ್ತಿಯ ಗುರುತು ಪತ್ತೆಹಚ್ಚುವ ಪ್ರಕ್ರಿಯೆ ಮುಂದುವರಿದಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನೆಲಮಂಗಲದ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಕಳುಹಿಸಲಾಗಿದೆ. ಪೊಲೀಸರು ಈಗಾಗಲೇ ಪ್ರಕರಣ ದಾಖಲಿಸಿಕೊಂಡಿದ್ದು, ಪರಾರಿಯಾದ ಟಿಟಿ ವಾಹನ ಹಾಗೂ ಅದರ ಚಾಲಕನ ಪತ್ತೆಗಾಗಿ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಸ್ಥಳೀಯ ಸಾರ್ವಜನಿಕರಿಂದ ಮಾಹಿತಿಯನ್ನು ಕಲೆಹಾಕುವ ಕಾರ್ಯವೂ ಜೋರಾಗಿ ಸಾಗುತ್ತಿದೆ.
- ಕರುನಾಡ ಕಂದ
