ಬಳ್ಳಾರಿ / ಕಂಪ್ಲಿ : ಪಟ್ಟಣದಲ್ಲಿ ಕಂಪ್ಲಿ ಪೊಲೀಸ್ ಠಾಣೆಯ ಪಿಐ ಕೆ.ಬಿ.ವಾಸುಕುಮಾರ ಅವರ ನೇತೃತ್ವದಲ್ಲಿ ಮಂಗಳವಾರ ಮಾದಕ ದ್ರವ್ಯ ಉಪಯೋಗದಿಂದಾಗುವ ದುಷ್ಪರಿಣಾಮಗಳ ಅರಿವು ಜಾಗೃತಿ ಜಾಥಾ ನಡೆಸಿದರು.
ಇಲ್ಲಿನ ವಿದ್ಯಾರ್ಥಿಗಳು ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತ ಬ್ಯಾನರ್ ಮತ್ತು ಬಂಟಿಂಗ್ ಗಳನ್ನು ಕೈಯಲ್ಲಿ ಹಿಡಿದು ಘೋಷಣೆಗಳನ್ನು ಕೂಗುತ್ತಾ ದಾರಿಯುದ್ದಕ್ಕೂ ಸಾಗಿದರು.
ಇಲ್ಲಿನ ಷಾಮಿಯಾಚಂದ್ ಸರ್ಕಾರಿ ಪಿಯು ಕಾಲೇಜು ಆವರಣದಿಂದ ಆರಂಭಗೊಂಡ ಜಾಗೃತಿ ಮೆರವಣಿಗೆ ಮಹಾತ್ಮಗಾಂಧಿ ವೃತ್ತ, ಡಾ. ಅಂಬೇಡ್ಕರ್ ವೃತ್ತ, ನಡುವಲ ಮಸೀದಿ ಸೇರಿದಂತೆ ವಿವಿಧ ರಸ್ತೆಗಳ ಮೂಲಕ ಸಂಚರಿಸಿ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.
ಪಿ.ಐ ಕೆ.ಬಿ.ವಾಸುಕುಮಾರ ಜಾಗೃತಿ ಅರಿವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಯುವಕರು ದೇಶದ ಆಸ್ತಿ. ಹೀಗಾಗಿ ಯಾವುದೇ ಕಾರಣಕ್ಕೂ ದುಶ್ಚಟಗಳಿಗೆ ಬಲಿಯಾಗಬಾರದು. ಮಾದಕ ದ್ರವ್ಯಗಳ ಮುಕ್ತ ಗ್ರಾಮಕ್ಕಾಗಿ ಎಲ್ಲರೂ ಪಣ ತೊಡಬೇಕು ಎಂದು ಹೇಳಿದರು.
ನಂತರ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಾರ್ವಜನಿಕರಿಗೆ ಮಾದಕ ದ್ರವ್ಯಗಳನ್ನು ಬಳಸದಂತೆ ಪ್ರತಿಜ್ಞೆ ವಿಧಿ ಬೋಧಿಸಿದರು.
ಈ ಸಂದರ್ಭದಲ್ಲಿ ಪಿಎಸ್ಐ ಅವಿನಾಶ್ ಕಾಂಬ್ಳೆ, ಉಪ ಪ್ರಾಚಾರ್ಯ ಸುಜಾತ ಸೇರಿದಂತೆ ಪೊಲೀಸ್ ಸಿಬ್ಬಂದಿಗಳು, ಶಾಲಾ-ಕಾಲೇಜು ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ವರದಿ : ಜಿಲಾನಸಾಬ್ ಬಡಿಗೇರ್



















