ಬೀದರ್: ಶಿಕ್ಷಣ ಇಲಾಖೆಯಿಂದಲೇ 25ಕ್ಕಿಂತ ಕಡಿಮೆ ಮಕ್ಕಳ ದಾಖಲಾತಿ ಇರುವ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚುವ ಪರೋಕ್ಷ ಪ್ರಯತ್ನ ನಡೆಯುತ್ತಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ ಆರೋಪಿಸಿದ್ದಾರೆ.
ಅವರು ಈ ಕುರಿತು ಪ್ರಕಟಣೆ ನೀಡಿದ್ದು, ವರ್ಗಾವಣೆ ಪ್ರಕ್ರಿಯೆ ವೇಳೆ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡದಿರುವುದು ಇದಕ್ಕೆ ನಿದರ್ಶನ. ಇದು ಶಿಕ್ಷಣ ಹಕ್ಕು ಕಾಯ್ದೆಯ ಉಲ್ಲಂಘನೆಯಾಗಿದೆ ಎಂದು ಹೇಳಿದ್ದಾರೆ.
ಈವರೆಗೆ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿಗಳಾಗಿದ್ದವರು ಶಾಲೆಗೆ ತೆರಳಲು ಕೌನ್ಸೆಲಿಂಗ್ನಲ್ಲಿ ಭಾಗವಹಿಸಿದರೆ 25 ಕ್ಕಿಂತ ಕಡಿಮೆ ಮಕ್ಕಳು ಇರುವ ಶಾಲೆಗಳ ಖಾಲಿ ಹುದ್ದೆಗಳು ಆನ್ಲೈನ್ನಲ್ಲಿ ತೋರಿಸುತ್ತಿಲ್ಲ. ಹೀಗಾಗಿ ಹೆಚ್ಚುವರಿ ಶಿಕ್ಷಕರು, ಸಿ.ಆರ್.ಪಿ.ಗಳು ಕೌನ್ಸೆಲಿಂಗ್ ನಲ್ಲಿ ಸ್ಥಳಸಿಗದೆ ಪರ ದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.
ಶಾಲಾ ಶಿಕ್ಷಣ ಇಲಾಖೆಯು ವರ್ಗಾವಣೆ ಕೌನ್ಸೆಲಿಂಗ್ ಮುಂದೂಡಿದ್ದು, ಮರು ಕೌನ್ಸೆಲಿಂಗ್ ನಡೆಸುವ ಜಿಲ್ಲೆಯಲ್ಲಿ ಎಲ್ಲ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಆನ್ಲೈನ್ನಲ್ಲಿ ಪ್ರಕಟಿಸಿ, ವರ್ಗಾವಣೆಯಲ್ಲಿ ಶಿಕ್ಷಕರಿಗೆ ಸ್ಥಳ ಆಯ್ಕೆಗೆ ಅವಕಾಶ ಕಲ್ಪಿಸಬೇಕು ಎಂದು ಆಗ್ರಹಿಸಿದ ಅವರು, ಜಿಲ್ಲೆಯ ಅನೇಕ ಶಾಲೆಗಳಲ್ಲಿ 25 ಕ್ಕಿಂತ ಹೆಚ್ಚು ಮಕ್ಕಳಿದ್ದರೂ ಒಬ್ಬರು ಕೂಡ ಕಾಯಂ ಶಿಕ್ಷಕರಿಲ್ಲ ಗಡಿ ಭಾಗದ ಶಾಲೆಗಳು ಒಳಗೊಂಡಂತೆ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ವಿಷಯಕ್ಕೊಬ್ಬರು ಶಿಕ್ಷಕರನ್ನು ನೇಮಿಸಿ ಗುಣಮಟ್ಟದ ಶಿಕ್ಷಣ ನೀಡುವುದು ಹಾಗೂ ಕನ್ನಡ ಶಾಲೆಗಳನ್ನು ಉಳಿಸುವುದು ರಾಜ್ಯ ಸರ್ಕಾರದ ಕರ್ತವ್ಯ ವಾಗಿದೆ. ಯಾವ ಕಾರಣಕ್ಕೂ ಕನ್ನಡ ಶಾಲೆಗಳನ್ನು ಮುಚ್ಚ ಬಾರದು. ಒಂದು ವೇಳೆ ಕ್ರಮಕ್ಕೆ ಮುಂದಾದರೆ ಕಸಾಪ ಕನ್ನಡ ಪರ, ಶಿಕ್ಷಕರ ಸಂಘಟನೆಗಳೊಂದಿಗೆ ಬೀದಿಗಿಳಿದು ಹೋರಾಟ ನಡೆಸಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
ವರದಿ: ಸಾಗರ ಪಡಸಲೆ, ಬೀದರ್




















