ಕೊಪ್ಪಳ : ತಾಲೂಕಿನ ಹುಲಿಗಿ ಗ್ರಾಮದ ಹುಲಿಗೆಮ್ಮ ದೇವಸ್ಥಾನಕ್ಕೆ ಪಾದಯಾತ್ರೆಗೆ ತೆರಳುತ್ತಿದ್ದ ಭಕ್ತರ ಮೇಲೆ ಖಾಸಗಿ ಸ್ಲೀಪರ್ ಕೋಚ್ ಬಸ್ ಹರಿದು ಮೂವರು ದುರ್ಮರಣ ಹೊಂದಿದ ಹೃದಯ ವಿದ್ರಾವಕ ಘಟನೆ ಕೊಪ್ಪಳ ಜಿಲ್ಲೆಯ ಕೂಕನಪಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಇಂದು ಮಂಗಳವಾರ ಬೆಳಗಿನ ಜಾವ ನಡೆದಿದೆ. ಭೀಕರ ಅಪಘಾತದಲ್ಲಿ ಅನ್ನಪೂರ್ಣ (40), ಪ್ರಕಾಶ್ (25), ಶರಣಪ್ಪ (19) ಎಂಬ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ಗದಗ ಜಿಲ್ಲೆಯ ರೋಣ ತಾಲೂಕಿನ ತಳ್ಳಿಹಾಳ ಗ್ರಾಮದವರಾಗಿದ್ದು, ಹುಲಿಗೆಮ್ಮ ದೇವಾಲಯದ ಪಾದಯಾತ್ರೆಗೆ ತೆರಳುತ್ತಿದ್ದರು. ಘಟನೆಯಲ್ಲಿ ನಾಲ್ವರು ಭಕ್ತರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಕೊಪ್ಪಳ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ವರದಿ : ಜಿಲಾನಸಾಬ್ ಬಡಿಗೇರ್




















