ವಿಜಯಪುರ: ಜಿಲ್ಲೆಯ ತೊರವಿ ಕಾರ್ಯಕ್ಷೇತ್ರದ ಶ್ರೀ ಸಿದ್ಧಲಿಂಗೇಶ್ವರ ವಿದ್ಯಾ ಅಭಿವೃದ್ಧಿ ಟ್ರಸ್ಟ್ ಅಡಿಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಶ್ರೀ ಸಿದ್ಧಲಿಂಗೇಶ್ವರ ಮಹಾಮಠದ ದೇವಸ್ಥಾನದ ಕಟ್ಟಡಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ₹ 2 ಲಕ್ಷ ದೇಣಿಗೆ ನೀಡಿದರು.
ಶ್ರೀಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾಗಿರುವ ಎರಡು ಲಕ್ಷ ಡಿ.ಡಿ.ಯನ್ನು ವಿಜಯಪುರ 2 ತಾಲ್ಲೂಕಿನ ಯೋಜನಾಧಿಕಾರಿ ಸತೀಶ್ ಅವರು ಮಠದ ಪೂಜ್ಯ ಶ್ರೀ ಸಿದ್ದಲಿಂಗ ಸಾಮಿಗಳಿಗೆ ಹಸ್ತಾಂತರಿಸಿ ಮಾತನಾಡಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯು ಸಮುದಾಯ ಅಭಿವೃದ್ಧಿ ಯೋಜನೆಯಲ್ಲಿ ಅನೇಕ ವರ್ಷಗಳಿಂದ ದೇವಸ್ಥಾನಗಳ ಜೀರ್ಣೋದ್ಧಾರಕ್ಕೂ ಕೂಡ ತನ್ನದೆಯಾದ ಕೊಡುಗೆ ನೀಡುತ್ತಾ ಬರುತ್ತಿದೆ.
ಈ ನಿಟ್ಟಿನಲ್ಲಿ ಶ್ರೀ ಸಿದ್ಧಲಿಂಗೇಶ್ವರ ಮಹಾಮಠದ ದೇವಸ್ಥಾನಕ್ಕೆ ಎರಡು ಲಕ್ಷ ರೂಪಾಯಿಗಳನ್ನು ಪೂಜ್ಯರು ಆಶೀರ್ವಾದದ ರೂಪದಲ್ಲಿ ನೀಡಿದ್ದಾರೆ ಎಂದರು.
ನಂತರ ಪೂಜ್ಯ ಶ್ರೀ ಸಿದ್ದಲಿಂಗ ಸ್ವಾಮೀಜಿಯವರು ಮಾತನಾಡಿ, ಸಾಮಾಜಿಕ, ಆರ್ಥಿಕ, ಧಾರ್ಮಿಕ ಹಾಗೂ ಮಹಿಳಾ ಸಬಲೀಕರಣಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿಗೆ ಶ್ರಮಿಸುತ್ತಿರುವುದು ಶ್ಲಾಘನೀಯವಾಗಿದೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ವಲಯದ ಮೇಲ್ವಿಚಾರಕರಾದ ವಿನಾಯಕ , ಪ್ರಸಾದ ಮತ್ತು ಸ್ಥಳೀಯ ಸೇವಾ ಪ್ರತಿನಿಧಿಗಳು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.
- ಕರುನಾಡ ಕಂದ ಪತ್ರಿಕೆ



















