ಕಂಪ್ಲಿ: ಪಟ್ಟಣದಲ್ಲಿ ಗಣರಾಜ್ಯೋತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಣೆ ಮಾಡಲು ತೀರ್ಮಾನಿಸಲಾಗಿದೆ ಎಂದು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷರು ಹಾಗೂ ತಹಸಿಲ್ದಾರರಾದ ಜೂಗಲ್ ಮಂಜೂನಾಯಕ ತಿಳಿಸಿದರು.
ಅವರು ಶುಕ್ರವಾರ ಪಟ್ಟಣದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ಆಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ ಗಣರಾಜ್ಯೋತ್ಸವ ನಿಮಿತ್ತ ಪಟ್ಟಣದ ವೃತ್ತಗಳನ್ನು, ಸರ್ಕಾರಿ ಕಚೇರಿಗಳನ್ನು ವಿದ್ಯುತ್ ದೀಪಗಳಿಂದ, ತಳಿರು ತೋರಣಗಳಿಂದ ಅಲಂಕರಿಸುವಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಿದರಲ್ಲದೆ, ಪಟ್ಟಣದ ಬೀದಿಗಳನ್ನು ಸ್ವಚ್ಛಗೊಳಿಸಿ, ತಳಿರು ತೋರಣಗಳಿಂದ ಅಲಂಕರಿಸುವಂತೆ ಸೂಚಿಸಿದರು.
ತಹಶೀಲ್ದಾರ್ ಕಚೇರಿ ಸೇರಿದಂತೆ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ, ಖಾಸಗಿ ಕಚೇರಿಗಳಲ್ಲಿ ಮತ್ತು ಶಾಲಾ ಕಾಲೇಜುಗಳಲ್ಲಿ ಬೆಳಿಗ್ಗೆ 8 ಗಂಟೆಯೊಳಗೆ ರಾಷ್ಟ್ರ ಧ್ವಜಾರೋಹಣವನ್ನು ನೆರವೇರಿಸಿ 9 ಗಂಟೆಗೆ ಪಟ್ಟಣದ ಷಾಮಿಯಾಚಂದ್ ಸರ್ಕಾರಿ ಪಿಯು ಕಾಲೇಜಿನ ಮೈದಾನದಲ್ಲಿ ನಡೆಯುವ ಸಾರ್ವಜನಿಕ ಗಣರಾಜ್ಯೋತ್ಸವದಲ್ಲಿ ಭಾಗವಹಿಸುವಂತೆ ಸೂಚಿಸಿದರಲ್ಲದೆ, ಸಾರ್ವಜನಿಕ ಮೈದಾನದಲ್ಲಿ ವಿದ್ಯಾರ್ಥಿಗಳಿಂದ, ಪೊಲೀಸ್ ಇಲಾಖೆ, ಗೃಹರಕ್ಷಕ ದಳಗಳಿಂದ ಆರ‍್ಷಕರ ಪಥಸಂಚಲನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದರು.
ಪೂರ್ವಭಾವಿ ಸಭೆಯಲ್ಲಿ ತಾ.ಪಂ. ಇಒ ಆರ್.ಕೆ.ಶ್ರೀಕುಮಾರ್, ಪುರಸಭೆ ಮುಖ್ಯಾಧಿಕಾರಿ ಬಿ. ಮಲ್ಲಿಕಾರ್ಜುನ, ಪಿಎಸ್ ಐ ಅವಿನಾಶ ಕಾಂಬಳೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.
ವರದಿ : ಜಿಲಾನಸಾಬ್ ಬಡಿಗೇರ್




















