
ಹೊನ್ನಾವರ: ತಾಲೂಕಿನ ಅಳ್ಳಂಕಿ ಸಮೀಪದ ರಾಷ್ಟ್ರೀಯ ಹೆದ್ದಾರಿ 69ರಲ್ಲಿ ಶ್ರೀಕುಮಾರ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ಹಲವು ಪ್ರಯಾಣಿಕರಿಗೆ ಗಾಯಗಳಾದ ಘಟನೆ ರವಿವಾರ ರಾತ್ರಿ ನಡೆದಿದೆ.
ಭಟ್ಕಳದಿಂದ ಬೆಂಗಳೂರಿನತ್ತ ತೆರಳುತ್ತಿದ್ದ ಬಸ್ಸಿನಲ್ಲಿ ಸುಮಾರು 28 ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಮಾರ್ಗ ಮಧ್ಯೆ ಅಳ್ಳಂಕಿ ಭಾಗಕ್ಕೆ ಬಂದಾಗ ಸ್ಕೂಟಿ ಸವಾರನನ್ನು ತಪ್ಪಿಸಲು ಪ್ರಯತ್ನಿಸಿದ ವೇಳೆ ಬಸ್ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾದುದಾಗಿ ತಿಳಿದು ಬಂದಿದೆ. ಪರಿಣಾಮವಾಗಿ ಬಸ್ಸಿನಲ್ಲಿದ್ದ ಕೆಲ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಇನ್ನೂ ಕೆಲವರಿಗೆ ಸಣ್ಣಪುಟ್ಟ ಪೆಟ್ಟಾಗಿವೆ.
ಅಪಘಾತ ಸಂಭವಿಸಿದ ತಕ್ಷಣ ಸ್ಥಳೀಯರು ತುರ್ತು ಸಹಾಯ ಕಾರ್ಯಾಚರಣೆ ಕೈಗೊಂಡು ಗಾಯಾಳುಗಳನ್ನು ಹೊರ ತೆಗೆದು ಸಮೀಪದ ಆಸ್ಪತ್ರೆಗೆ ಸಾಗಿಸಲು ಸಹಕರಿಸಿದರು. ಗಾಯಗೊಂಡ ಪ್ರಯಾಣಿಕರನ್ನು ಹೊನ್ನಾವರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಹೊನ್ನಾವರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಪರಿಶೀಲನೆ ನಡೆಸಿದರು. ಅಪಘಾತದ ನಿಖರ ಕಾರಣ ಕುರಿತು ಮಾಹಿತಿ ಸಂಗ್ರಹಿಸಲಾಗುತ್ತಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿದು ಬರಬೇಕಿದೆ.
ಅಪಘಾತದಿಂದ ಕೆಲಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರದಲ್ಲಿ ಅಡಚಣೆ ಉಂಟಾಗಿದ್ದು, ಬಳಿಕ ಪೊಲೀಸರು ಮತ್ತು ಸ್ಥಳೀಯರ ಸಹಕಾರದಿಂದ ಸಂಚಾರವನ್ನು ಪುನಃ ಸಜ್ಜುಗೊಳಿಸಲಾಯಿತು. ಘಟನೆಯ ಕುರಿತು ಪೊಲೀಸರು ಮುಂದಿನ ತನಿಖೆ ಮುಂದುವರೆಸಿದ್ದಾರೆ.
ವರದಿ :ವಿನಾಯಕ ಆಚಾರಿ ಹೊನ್ನಾವರ



















