ಕೋಲ್ಕತ್ತಾ: ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಮಹತ್ವದ ಬದಲಾವಣೆಗೆ ಇಂದು ಸಾಕ್ಷಿಯಾಯಿತು. ಹಲವು ದಶಕಗಳಿಂದ ತೃಣಮೂಲ ಕಾಂಗ್ರೆಸ್ ಪ್ರಭಾವದಲ್ಲಿದ್ದ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಸರ್ಕಾರ ರಚನೆಯಾಗುವ ದಿಕ್ಕಿನಲ್ಲಿ ಬೆಳವಣಿಗೆ ನಡೆದಿದೆ. ಬಿಜೆಪಿ ಹಿರಿಯ ನಾಯಕ ಹಾಗೂ ‘ಜೈಂಟ್ ಕಿಲ್ಲರ್’ ಎಂದೇ ಗುರುತಿಸಿಕೊಂಡಿರುವ ಸುವೇಂದು ಅಧಿಕಾರಿ ಅವರನ್ನು ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆ ಮಾಡಲಾಗಿದ್ದು, ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಲಿದ್ದಾರೆ.!
ಕೋಲ್ಕತ್ತಾದಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಸುವೇಂದು ಅಧಿಕಾರಿಯವರ ಹೆಸರನ್ನು ಸರ್ವಾನುಮತದಿಂದ ಅಂಗೀಕರಿಸಲಾಯಿತು. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಈ ಘೋಷಣೆ ಹೊರಬಿದ್ದಿದ್ದು, ಬಿಜೆಪಿ ಕಾರ್ಯಕರ್ತರಲ್ಲಿ ಸಂಭ್ರಮ ಮನೆಮಾಡಿದೆ.
ಮಮತಾ ಬ್ಯಾನರ್ಜಿ ವಿರುದ್ಧ ಸತತ ಗೆಲುವು:
ಸುವೇಂದು ಅಧಿಕಾರಿ ಹೆಸರು ಬಂಗಾಳ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದು, ಅದರ ಹಿಂದೆ ಮಮತಾ ಬ್ಯಾನರ್ಜಿ ವಿರುದ್ಧದ ಅವರ ನಿರಂತರ ರಾಜಕೀಯ ಗೆಲುವುಗಳಿವೆ. ನಂದಿಗ್ರಾಮದಲ್ಲಿ ಮಮತಾ ಅವರನ್ನು ಸೋಲಿಸಿ ದೇಶದಾದ್ಯಂತ ಸುದ್ದಿಯಾಗಿದ್ದ ಸುವೇಂದು, ಈ ಬಾರಿಯ ಚುನಾವಣೆಯಲ್ಲಿ ಭವಾನಿಪುರ ಕ್ಷೇತ್ರದಲ್ಲೂ ಭರ್ಜರಿ ಗೆಲುವು ಸಾಧಿಸಿ ಮತ್ತೊಮ್ಮೆ ತಮ್ಮ ಪ್ರಭಾವ ಸಾಬೀತುಪಡಿಸಿದ್ದಾರೆ.
ಬ್ರಿಗೇಡ್ ಮೈದಾನದಲ್ಲಿ ಪ್ರಮಾಣ ವಚನ:
ನಾಳೆ ಕೋಲ್ಕತ್ತಾದ ಐತಿಹಾಸಿಕ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ಸುವೇಂದು ಅಧಿಕಾರಿ ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಸೇರಿದಂತೆ ಬಿಜೆಪಿಯ ಅನೇಕ ರಾಷ್ಟ್ರೀಯ ನಾಯಕರು ಆಗಮಿಸುವ ನಿರೀಕ್ಷೆಯಿದೆ. ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಗಣ್ಯರು ಸಹ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ರೂಪಾ ಗಂಗೂಲಿ ಉಪಮುಖ್ಯಮಂತ್ರಿ !?
ಬಿಜೆಪಿ ಹಿರಿಯ ನಾಯಕಿ ಹಾಗೂ ಖ್ಯಾತ ನಟಿ ರೂಪಾ ಗಂಗೂಲಿ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವ ಸಾಧ್ಯತೆಗಳೂ ಗಟ್ಟಿಯಾಗಿವೆ. ಪಕ್ಷದ ಮೂಲಗಳ ಪ್ರಕಾರ, ಮಹಿಳಾ ನಾಯಕತ್ವಕ್ಕೆ ಹೆಚ್ಚಿನ ಪ್ರಾತಿನಿಧ್ಯ ನೀಡುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗುತ್ತಿದೆ ಎನ್ನಲಾಗಿದೆ.
ಒಮ್ಮೆ ಮಮತಾ ಬ್ಯಾನರ್ಜಿ ಅವರ ಆಪ್ತ ವಲಯದಲ್ಲಿದ್ದ ಸುವೇಂದು ಅಧಿಕಾರಿ, ಇದೀಗ ಬಂಗಾಳದ ಆಡಳಿತದ ಚುಕ್ಕಾಣಿ ಹಿಡಿಯಲು ಸಜ್ಜಾಗಿದ್ದು, “ಸೋನಾರ್ ಬಾಂಗ್ಲಾ” ಕನಸನ್ನು ನನಸು ಮಾಡುವ ಭರವಸೆ ನೀಡಿದ್ದಾರೆ.
ವರದಿ ವಿಠ್ಠಲ ಖೋಕಾಟೆ




















