ಬಳ್ಳಾರಿ / ಕಂಪ್ಲಿ : ಪಟ್ಟಣದ ಇಲ್ಲಿನ ಕೋಟೆಯಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆ ವತಿಯಿಂದ ವಿಶೇಷ ದಾಖಲಾತಿ ಆಂದೋಲನ ನಡೆಸಲಾಯಿತು.
ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ದಾಖಲಿಸುವ ಮೂಲಕ ಶಾಲೆಗಳನ್ನು ಉಳಿಸಬೇಕು ಎಂದು ಶಿಕ್ಷಕ ಚಂದ್ರಶೇಖರ್ ಶೆಟ್ರು ಅಭಿಪ್ರಾಯ ವ್ಯಕ್ತಪಡಿಸಿದರು.
ಶಾಲೆಯ ವ್ಯಾಪ್ತಿಯಿಂದ ಕೋಟೆಯ ಪ್ರತಿ ವಾರ್ಡ್ ಓಣಿಯಲ್ಲಿ ವಿವಿಧ ವಾದ್ಯ ಮೇಳಗಳೊಂದಿಗೆ ಆರಂಭವಾದ ಆಂದೋಲನ ಮೆರವಣಿಗೆ ಮುಖ್ಯ ರಸ್ತೆಗಳಲ್ಲಿ ಸಾಗಿ ಆಂದೊಲನ ಮೂಲಕ ಸರ್ಕಾರಿ ಶಾಲೆಗಳನ್ನು ಬಲಪಡಿಸುವಂತೆ ಜಾಗೃತಿ ಮೂಡಿಸಿತು.
ಶಾಲಾ ಪ್ರಾರಂಭೋತ್ಸವ ಪ್ರಯುಕ್ತ ಶಾಲೆಯನ್ನು ತಳಿರು ತೋರಣಗಳಿಂದ ಅಲಂಕರಿಸಿ ವಿದ್ಯಾರ್ಥಿಗಳನ್ನು ಸಂಭ್ರಮದಿಂದ ಸ್ವಾಗತಿಸಲಾಯಿತು.
ಈ ವೇಳೆ ಸ.ಹಿ.ಪ್ರಾ.ಶಾಲೆಯ ಮುಖ್ಯ ಗುರುಗಳಾದ ಸುನೀತಾ ಪೂಜಾರ್, ಸಹ ಶಿಕ್ಷಕಿ ಎಸ್.ಭವ್ಯ ಹಾಗೂ ಸ.ಉ.ಕಿ.ಪ್ರಾ.ಶಾಲೆಯ ಮುಖ್ಯ ಗುರುಗಳಾದ ಸಿರಾಜುದ್ದೀನ್ ಮನಿಯಾರ್ ದಾಖಲಾತಿ ಆಂದೋಲನದಲ್ಲಿ ಭಾಗವಹಿಸಿದ್ದರು.
ವರದಿ : ಜಿಲಾನಸಾಬ್ ಬಡಿಗೇರ್




















