ಕೊರಟಗೆರೆಯಲ್ಲಿ ಮತದಾರರ ನೋಂದಣಾಧಿಕಾರಿಗಳ ಸಭೆ – ಚುನಾವಣೆ ಪಾರದರ್ಶಕತೆಗೆ ಒತ್ತು
ಕೊರಟಗೆರೆ : ಮುಂಬರುವ ಚುನಾವಣೆಗಳನ್ನು ಪಾರದರ್ಶಕ ಹಾಗೂ ದೋಷರಹಿತವಾಗಿ ನಡೆಸುವ ಉದ್ದೇಶದಿಂದ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಕೊರಟಗೆರೆ ತಹಶೀಲ್ದಾರ್ ಹಾಗೂ ಚುನಾವಣಾಧಿಕಾರಿ ತಿಳಿಸಿದ್ದಾರೆ.
ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಮತದಾರರ ನೋಂದಣಾಧಿಕಾರಿಗಳು ಹಾಗೂ ಸಹಾಯಕ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಮತದಾರರ ಪಟ್ಟಿಯು ಪ್ರಜಾಪ್ರಭುತ್ವದ ಮೂಲಾಧಾರವಾಗಿದ್ದು, ಪ್ರತಿಯೊಬ್ಬ ಅರ್ಹ ನಾಗರಿಕನ ಹೆಸರು ಪಟ್ಟಿಯಲ್ಲಿ ಸೇರ್ಪಡೆಯಾಗುವಂತೆ ಅಧಿಕಾರಿಗಳು ವಿಶೇಷ ಕಾಳಜಿ ವಹಿಸಬೇಕು ಎಂದು ಸೂಚಿಸಿದರು.
ಈ ಸಂದರ್ಭದಲ್ಲಿ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ- 2026ರ ಕಾರ್ಯಚಟುವಟಿಕೆಗಳ ಕುರಿತು ವಿವರವಾಗಿ ಚರ್ಚಿಸಲಾಯಿತು. ಮತದಾರರ ಪಟ್ಟಿಯಲ್ಲಿ ಹೊಸದಾಗಿ ಅರ್ಹತೆ ಪಡೆದ ಯುವ ಮತದಾರರ ಹೆಸರು ಸೇರ್ಪಡೆ, ಮರಣ ಹೊಂದಿದ ಅಥವಾ ಸ್ಥಳಾಂತರಗೊಂಡ ಮತದಾರರ ಹೆಸರುಗಳನ್ನು ತೆಗೆದುಹಾಕುವುದು ಹಾಗೂ ವಿಳಾಸ ಬದಲಾವಣೆ ಸೇರಿದಂತೆ ವಿವಿಧ ಅರ್ಜಿಗಳನ್ನು ಶೀಘ್ರವಾಗಿ ಇದೇ ವರ್ಷ 07-10-2026 ರ ಒಳಗೆ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು.
ತಹಶೀಲ್ದಾರ್ ಮಂಜುನಾಥ್ ಮಾತನಾಡಿ : ಮತದಾರರ ಪಟ್ಟಿ ಚುನಾವಣೆಯ ಜೀವಾಳವಾಗಿದೆ. ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಅಧಿಕಾರಿಗಳು ಮನೆಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಮತದಾರರ ಪಟ್ಟಿಯ ನಿಖರತೆ ಚುನಾವಣೆಯ ವಿಶ್ವಾಸಾರ್ಹತೆಯನ್ನು ಹೆಚ್ಚಿಸುತ್ತದೆ. ಈ ಕಾರ್ಯದಲ್ಲಿ ನಿರ್ಲಕ್ಷ್ಯಕ್ಕೆ ಅವಕಾಶವಿಲ್ಲ. ಪ್ರತಿಯೊಬ್ಬ ಅಧಿಕಾರಿಯೂ ತಮ್ಮ ಜವಾಬ್ದಾರಿಯನ್ನು ಅರಿತು ಕಾರ್ಯನಿರ್ವಹಿಸಬೇಕು” ಈಗಾಗಲೇ ಕೊರಟಗೆರೆ ವಿಧಾನಸಭಾ ಕ್ಷೇತ್ರದ ಎನ್ರೋಲ್ ಮ್ಯಾಪಿಂಗ್ ಶೇಕಡ 94 .35 ರಷ್ಟು ಪೂರ್ಣಗೊಂಡಿದೆ ಎಂದು ತಹಶೀಲ್ದಾರ್ ಹೇಳಿದರು.
ಅಧಿಕಾರಿಗಳು ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಸಾರ್ವಜನಿಕರಿಂದ ಬರುವ ಅರ್ಜಿಗಳನ್ನು ಸಮಯಕ್ಕೆ ಸರಿಯಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು. ವಿಶೇಷವಾಗಿ ಯುವ ಮತದಾರರನ್ನು ಗುರುತಿಸಿ ಮತದಾರರ ಪಟ್ಟಿಗೆ ಸೇರಿಸುವ ಕಾರ್ಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಅವರು ತಿಳಿಸಿದರು.
ಚುನಾವಣಾಧಿಕಾರಿ ಮಾತನಾಡಿ : “ಸ್ವಚ್ಛ, ನಿಖರ ಮತ್ತು ಸಮಗ್ರ ಗುಣಮಟ್ಟದ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವುದು ನಮ್ಮ ಪ್ರಮುಖ ಗುರಿಯಾಗಿದೆ. ಮತದಾರರ ಪಟ್ಟಿಯಲ್ಲಿ ಯಾವುದೇ ದೋಷಗಳು ಉಳಿಯದಂತೆ ಅಧಿಕಾರಿಗಳು ಕ್ಷೇತ್ರ ಮಟ್ಟದಲ್ಲಿ ಹೆಚ್ಚಿನ ಜಾಗ್ರತೆ ವಹಿಸಬೇಕು. ಚುನಾವಣಾ ಪ್ರಕ್ರಿಯೆಯ ಮೇಲಿನ ಸಾರ್ವಜನಿಕರ ವಿಶ್ವಾಸವನ್ನು ಉಳಿಸಿಕೊಳ್ಳಲು ಪಾರದರ್ಶಕತೆ ಹಾಗೂ ಹೊಣೆಗಾರಿಕೆ ಅತ್ಯಗತ್ಯ” ಎಂದು ಚುನಾವಣಾಧಿಕಾರಿ ಹೇಳಿದರು.
ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ಕೂ ಒತ್ತು ನೀಡಬೇಕು. ಮತದಾರರು ತಮ್ಮ ಹೆಸರು, ವಿಳಾಸ ಮತ್ತು ಇತರ ಮಾಹಿತಿಯನ್ನು ಪರಿಶೀಲಿಸಿ ಅಗತ್ಯ ತಿದ್ದುಪಡಿಗಳನ್ನು ಮಾಡಿಸಿಕೊಳ್ಳಲು ಪ್ರೋತ್ಸಾಹಿಸಬೇಕು ಎಂದು ಅವರು ಹೇಳಿದರು.
ಸಭೆಯಲ್ಲಿ ಮತದಾರರ ನೋಂದಣಾಧಿಕಾರಿಗಳು, ಸಹಾಯಕ ಮತದಾರರ ನೋಂದಣಾಧಿಕಾರಿಗಳು. ಕಂದಾಯ ಅಧಿಕಾರಿ ಬಸವರಾಜ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆ ಕಾಂಗ್ರೆಸ್ ಮುಖಂಡರು ಅರವಿಂದ್ ಉಪ್ಪಿ,ಅಶ್ವಥ್ ನಾರಾಯಣ್ ಹಾಗೂ ಜೆಡಿಎಸ್ ಮುಖಂಡ ಕಾಮರಾಜು, ಭಾಗವಹಿಸಿದ್ದರು. ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ನಿಗದಿತ ವೇಳಾಪಟ್ಟಿಯಂತೆ ಪೂರ್ಣಗೊಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಕುರಿತು ಚರ್ಚೆ ನಡೆಸಲಾಯಿತು.
ಮುಂಬರುವ ಚುನಾವಣೆಯನ್ನು ಯಶಸ್ವಿಯಾಗಿ ನಡೆಸಲು ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯ ಅತ್ಯಂತ ಮಹತ್ವದ್ದಾಗಿದ್ದು, ಎಲ್ಲಾ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸುವ ಮೂಲಕ ಚುನಾವಣಾ ಆಯೋಗದ ಆಶಯಗಳನ್ನು ಯಶಸ್ವಿಗೊಳಿಸಬೇಕು ಎಂದು ಸಭೆಯಲ್ಲಿ ಕರೆ ನೀಡಲಾಯಿತು.
ವರದಿ :ಪ್ರಸನ್ನಕುಮಾರ್. ಎಸ್., ಕೊರಟಗೆರೆ




















