ಮಧುಗಿರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ : ದೇಶಭಕ್ತಿ, ಸಮಾನತೆಯ ಸಂದೇಶ ಸಾರಿದ ಶಾಸಕ ಕೆ. ಎನ್. ರಾಜಣ್ಣ
ಮಧುಗಿರಿ: ಮಧುಗಿರಿಯ ಸರ್ಕಾರಿ ಶಾಲೆಯ ಪಿ.ಎಂ. ಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶಾಸಕ ಕೆ.ಎನ್. ರಾಜಣ್ಣ ಅವರು ಧ್ವಜಾರೋಹಣ ನೆರವೇರಿಸಿ, ವಿದ್ಯಾರ್ಥಿಗಳಿಗೆ ದೇಶಭಕ್ತಿ ಹಾಗೂ ರಾಷ್ಟ್ರಪ್ರೇಮದ ಮಹತ್ವವನ್ನು ತಿಳಿಸಿದರು.
ಧ್ವಜಾರೋಹಣದ ಬಳಿಕ ಮಾತನಾಡಿದ ಶಾಸಕ ಕೆ.ಎನ್. ರಾಜಣ್ಣ ಅವರು, ದೇಶದ ಸ್ವಾತಂತ್ರ್ಯಕ್ಕಾಗಿ ಅನೇಕ ಮಹನೀಯರು ತಮ್ಮ ಜೀವನವನ್ನೇ ತ್ಯಾಗ ಮಾಡಿದ್ದಾರೆ. ಅವರ ಹೋರಾಟ, ತ್ಯಾಗ ಮತ್ತು ದೇಶ ಸೇವೆಯ ಕುರಿತು ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು ದೇಶದ ಬಗ್ಗೆ ಗೌರವ, ಅಭಿಮಾನ ಹಾಗೂ ದೇಶಭಕ್ತಿಯ ಭಾವನೆ ಮಕ್ಕಳಲ್ಲಿ ಬಾಲ್ಯದಿಂದಲೇ ಮೂಡಬೇಕು ಎಂದು ಹೇಳಿದರು.
ಇದೇ ವೇಳೆ ಡಾ. ಬಿ. ಆರ್. ಅಂಬೇಡ್ಕರ್ ಅವರ ಕೊಡುಗೆಯನ್ನು ಸ್ಮರಿಸಿದ ಅವರು, ಸಂವಿಧಾನವು ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಹಕ್ಕು ಮತ್ತು ಅವಕಾಶಗಳನ್ನು ಕಲ್ಪಿಸಿದೆ. ವಿಶೇಷವಾಗಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸೇರಿದಂತೆ ಹಿಂದುಳಿದ ವರ್ಗಗಳ ಜನರಿಗೆ ಸಂವಿಧಾನವು ಮಹತ್ವದ ರಕ್ಷಣಾ ಕವಚವಾಗಿದೆ. ಸಂವಿಧಾನದ ಆಶಯದಂತೆ ದೇಶದಲ್ಲಿ ಯಾರಿಗೂ ತಾರತಮ್ಯವಾಗಬಾರದು ಹಾಗೂ ಎಲ್ಲರೂ ಸಮಾನತೆಯಿಂದ ಬದುಕಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿ ಗುಟೂರು ಶಿವಪ್ಪ, ತಹಶೀಲ್ದಾರ್ ನಂದಿನಿ, ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಉತ್ತಮ್, ಡಿ ವೈ ಎಸ್ ಪಿ ಮಂಜುನಾಥ್, ಗಂಗಣ್ಣ ಸೇರಿದಂತೆ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಪದಾಧಿಕಾರಿಗಳು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳು ದೇಶಭಕ್ತಿ ಗೀತೆಗಳು, ನೃತ್ಯ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ನಾಟಕಗಳನ್ನು ಪ್ರದರ್ಶಿಸಿದರು.
ವಿದ್ಯಾರ್ಥಿಗಳ ಮನೋಜ್ಞ ಪ್ರದರ್ಶನ ಕಾರ್ಯಕ್ರಮಕ್ಕೆ ಮತ್ತಷ್ಟು ಮೆರುಗು ತಂದಿತು.
ದೇಶಭಕ್ತಿ ಹಾಗೂ ರಾಷ್ಟ್ರಪ್ರೇಮದ ಸಂದೇಶದೊಂದಿಗೆ ಕಾರ್ಯಕ್ರಮವು ಸಡಗರ ಸಂಭ್ರಮದಿಂದ ನೆರವೇರಿತು.
ವರದಿ: ರಂಗರಾಜು ಎಂ. ಗರಣಿ




















