
ಕೊರಟಗೆರೆ: ಸಾಮಾಜಿಕ ನ್ಯಾಯದ ಹರಿಕಾರ, ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸ್ ಅವರು ಹಿಂದುಳಿದ ವರ್ಗಗಳ ಏಳಿಗೆಗೆ ನೀಡಿದ ಕೊಡುಗೆ ಅಪಾರ. ಜೀತದಾಳಾಗಿದ್ದವರನ್ನು ಅರಸರನ್ನಾಗಿ ಮಾಡಿದವರು ದೇವರಾಜ ಅರಸ್ ಎಂಬುದನ್ನು ಹೆಮ್ಮೆಯಿಂದ ಹೇಳಬಹುದು ಎಂದು ಹಾಲಪ್ಪ ಫೌಂಡೇಶನ್ ಸಂಸ್ಥೆಯ ಮುಖ್ಯಸ್ಥ ಮುರುಳಿಧರಲ್ಲಪ್ಪ ಹೇಳಿದರು.
ಕೊರಟಗೆರೆಯ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸ್ ಅವರ ಜನ್ಮದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಪ್ರಬಂಧ ಹಾಗೂ ಭಾಷಣ ಸ್ಪರ್ಧೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ದೇವರಾಜ ಅರಸ್ ಅವರು ಸಾಮಾಜಿಕ ನ್ಯಾಯದ ಪರವಾಗಿ ಹಲವು ಮಹತ್ವದ ಬದಲಾವಣೆಗಳಿಗೆ ಕಾರಣರಾದರು. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಗೌರವಯುತ ಬದುಕು ಹಾಗೂ ಅವಕಾಶ ದೊರೆಯಬೇಕು ಎಂಬ ಆಶಯದೊಂದಿಗೆ ಕಾರ್ಯನಿರ್ವಹಿಸಿದ ಅವರ ಚಿಂತನೆ ಇಂದಿನ ಯುವಜನತೆಗೆ ಮಾದರಿಯಾಗಬೇಕು.
ವಿದ್ಯಾರ್ಥಿಗಳು ಅವರ ಜೀವನ, ಹೋರಾಟ ಹಾಗೂ ಸಾಧನೆಗಳನ್ನು ಅರಿತುಕೊಳ್ಳಬೇಕು ಎಂದು ಸಲಹೆ ನೀಡಿದರು.
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ದೂರದೃಷ್ಟಿ ಹಾಗೂ ದೇಶದ ಅಭಿವೃದ್ಧಿಗೆ ನೀಡಿದ ಕೊಡುಗೆಗಳನ್ನು ಸ್ಮರಿಸಿದ ಅವರು, ಯುವಜನತೆ ಶಿಕ್ಷಣದೊಂದಿಗೆ ತಂತ್ರಜ್ಞಾನ ಹಾಗೂ ದೇಶ ನಿರ್ಮಾಣದ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದರು.
ವಿದ್ಯಾರ್ಥಿಗಳಿಂದ ವಿಚಾರ ಮಂಡನೆ
ರಾಜೀವ್ ಗಾಂಧಿ ಹಾಗೂ ದೇವರಾಜ ಅರಸ್ ಅವರ ಜೀವನ ಮತ್ತು ನಡೆದುಬಂದ ಹಾದಿಯ ಕುರಿತು ವಿದ್ಯಾರ್ಥಿಗಳು ಪ್ರಬಂಧ ಹಾಗೂ ಭಾಷಣ ಸ್ಪರ್ಧೆಯಲ್ಲಿ ತಮ್ಮ ಅನಿಸಿಕೆ, ಅಭಿಪ್ರಾಯಗಳನ್ನು ಮಂಡಿಸಿದರು. ಸ್ಪರ್ಧೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರಥಮ, ದ್ವಿತೀಯ, ತೃತೀಯ ಹಾಗೂ ಸಮಾಧಾನಕರ ಬಹುಮಾನಗಳನ್ನು ಮುರುಳಿಧರಲ್ಲಪ್ಪ ಹಾಗೂ ಕಾಲೇಜಿನ ಶಿಕ್ಷಕರು ವಿತರಿಸಿ ಅಭಿನಂದಿಸಿದರು.
ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ಮಾರ್ಗದರ್ಶನ
ಸಮಾಜ ಸೇವಕ ಬಾಲಾಜಿ ದರ್ಶನ್ ಮಾತನಾಡಿ, ವಿದ್ಯಾರ್ಥಿಗಳು ಪದವಿ ಶಿಕ್ಷಣಕ್ಕೆ ಮಾತ್ರ ಸೀಮಿತವಾಗದೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ಸಿದ್ಧರಾಗಬೇಕು. ವಿದ್ಯಾರ್ಥಿಗಳಲ್ಲಿ ಪ್ರತಿಭೆ ಹಾಗೂ ಸಾಮರ್ಥ್ಯವಿದ್ದು, ಸರಿಯಾದ ಮಾರ್ಗದರ್ಶನ ದೊರೆತರೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಬಹುದು. ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಹೆಚ್ಚಿಸಲು ಸಹಕಾರಿಯಾಗುತ್ತವೆ ಎಂದರು.
ಇದೇ ಸಂದರ್ಭದಲ್ಲಿ ಕಾಲೇಜಿನ ಶಿಕ್ಷಕರೊಬ್ಬರು ಮಾತನಾಡಿ, ಕಾಲೇಜು ಮುಗಿಸಿದ ನಂತರವೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸಲು ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳಿಗೆ ಪ್ರತಿದಿನ ಒಂದು ಗಂಟೆ ಉಚಿತವಾಗಿ ಮಾರ್ಗದರ್ಶನ ನೀಡುವುದಾಗಿ ತಿಳಿಸಿದರು. ಆಸಕ್ತ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.
ಸೌಲಭ್ಯ ಕಲ್ಪಿಸುವ ಭರವಸೆ
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಕಾಲೇಜಿಗೆ ಅಗತ್ಯವಿರುವ ಕೆಲವು ಮೂಲಭೂತ ಸೌಲಭ್ಯಗಳ ಕುರಿತು ಮುರುಳಿಧರಲ್ಲಪ್ಪ ಅವರ ಗಮನಕ್ಕೆ ತಂದರು. ಇದಕ್ಕೆ ಸ್ಪಂದಿಸಿದ ಅವರು, ಕ್ಷೇತ್ರದ ಉಪಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಕಾಲೇಜಿನ ಸಮಸ್ಯೆಗಳ ಕುರಿತು ಚರ್ಚಿಸುವುದಾಗಿ ತಿಳಿಸಿದರು.
ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೂ ಸಮಸ್ಯೆಗಳನ್ನು ತಂದು, ವಿದ್ಯಾರ್ಥಿಗಳಿಗೆ ಅಗತ್ಯವಿರುವ ಸೌಲಭ್ಯಗಳನ್ನು ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು, ಶಿಕ್ಷಕರು, ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಜಯಮ್ಮ ಹಾಗೂ ಸದಸ್ಯರು, ಹಾಲಪ್ಪ ಫೌಂಡೇಶನ್ ಪದಾಧಿಕಾರಿಗಳು ಸೇರಿದಂತೆ ನೂರಾರು ವಿದ್ಯಾರ್ಥಿ-ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ವರದಿ. ಪ್ರಸನ್ನ ಕುಮಾರ್. ಎಸ್. ಕೊರಟಗೆರೆ




















