ಕಂಪ್ಲಿ: ವಿದ್ಯಾರ್ಥಿಗಳು ಹಾಗೂ ಯುವಜನತೆ ಮಾದಕ ದ್ರವ್ಯಗಳ ದುಶ್ಚಟಗಳಿಗೆ ಬಲಿಯಾಗದೆ, ಸದೃಢ ಮತ್ತು ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಬಳ್ಳಾರಿ ಮತ್ತು ಕಂಪ್ಲಿಯ 1ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಸಿದ್ದಲಿಂಗಯ್ಯ ಗಂಗಾಧರಮಠ ಅವರು ಕರೆ ನೀಡಿದರು.
ಪಟ್ಟಣದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ಕರ್ನಾಟಕ ಸರ್ಕಾರದ ಅಬಕಾರಿ ಇಲಾಖೆ, ನ್ಯಾಯಾಂಗ ಇಲಾಖೆ ಹಾಗೂ ಕಂಪ್ಲಿ ವಕೀಲರ ಸಂಘದ ಸಹಯೋಗದಲ್ಲಿ ಆಯೋಜಿಸಲಾಗಿದ್ದ ‘ಮಾದಕ ದ್ರವ್ಯ ಮುಕ್ತ ಭಾರತ ಅಭಿಯಾನ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳು ಹಾಗೂ ಕಾನೂನು ಅರಿವಿನ ಕುರಿತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಂಪ್ಲಿ ವಕೀಲರ ಸಂಘದ ಅಧ್ಯಕ್ಷರಾದ ಹರೀಶ್ ಅಯೋಧಿ ವಹಿಸಿದ್ದರು. ಈ ಸಂದರ್ಭದಲ್ಲಿ ಕಂಪ್ಲಿ ಪೊಲೀಸ್ ಠಾಣೆಯ ಪಿಐ ಕೆಬಿ ವಾಸುಕುಮಾರ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಜೇರು ಮಲ್ಲಿಕಾರ್ಜುನ, ಕಂಪ್ಲಿ ಅಬಕಾರಿ ನಿರೀಕ್ಷಕರಾದ ಉಷಾ ಯಂಡಿಗೇರಿ, ವಕೀಲರ ಸಂಘದ ಕಾರ್ಯದರ್ಶಿ ಟಿ. ಶಿವಪ್ಪ ಹಾಗೂ ವಕೀಲರಾದ ಎಂ. ವಿಜಯಲಕ್ಷ್ಮಿ ಅವರು ಪಾಲ್ಗೊಂಡು ಮಾದಕ ದ್ರವ್ಯ ನಿಷೇಧದ ಕುರಿತು ಮಾತನಾಡಿದರು.
ಕರ್ನಾಟಕ ರಾಜ್ಯ ಅಬಕಾರಿ ಇಲಾಖೆಯ ಅಧಿಕಾರಿಗಳು, ಕಾಲೇಜಿನ ಉಪನ್ಯಾಸಕ ವೃಂದ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಅನುದೀಪ್ ಪೂಜಾರ್ ನಿರೂಪಿಸಿ ವಂದಿಸಿದರು.
ವರದಿ : ಜಿಲಾನಸಾಬ್ ಬಡಿಗೇರ್




















