ಕಂಪ್ಲಿ : “ನದಿಯನ್ನೇ ನಂಬಿ ಬದುಕು ಕಟ್ಟಿಕೊಂಡಿರುವ ಮೀನುಗಾರರ ಜೀವನ ಇಂದು ತೀವ್ರ ಸಂಕಷ್ಟದಲ್ಲಿದೆ. ಅವರ ಆರ್ಥಿಕ ಹಾಗೂ ಸಾಮಾಜಿಕ ಸ್ಥಿತಿಗತಿ ಸುಧಾರಿಸಲು ಸರ್ಕಾರ ಕೇವಲ ಘೋಷಣೆಗಳಿಗೆ ಸೀಮಿತವಾಗದೆ, ಅಗತ್ಯ ಮೂಲಭೂತ ಸೌಲಭ್ಯಗಳು ಹಾಗೂ ಕಲ್ಯಾಣ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು” ಎಂದು ಬಿಜೆಪಿ ಮೀನುಗಾರರ ಪ್ರಕೋಷ್ಠದ ರಾಜ್ಯ ಸಮಿತಿ ಸದಸ್ಯ ರಾಘವೇಂದ್ರ ತಳವಾರ ಸರ್ಕಾರವನ್ನು ಒತ್ತಾಯಿಸಿದರು.
ಪಟ್ಟಣದ ಕೋಟೆ ಪ್ರದೇಶದ ತುಂಗಭದ್ರಾ ನದಿ ದಡದಲ್ಲಿ ‘ವಿಶ್ವ ಮೀನುಗಾರಿಕೆ ದಿನಾಚರಣೆ’ಯ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ವಿಶೇಷ ಕಾರ್ಯಕ್ರಮದಲ್ಲಿ ಹಿರಿಯ ಹಾಗೂ ಸ್ಥಳೀಯ ಮೀನುಗಾರರನ್ನು ಸನ್ಮಾನಿಸಿ ಅವರು ಮಾತನಾಡಿದರು.
“ಸಮಾಜಕ್ಕೆ ಪೌಷ್ಟಿಕ ಆಹಾರ ಒದಗಿಸುವ ಮೀನುಗಾರರಿಗೆ ಇಂದಿಗೂ ಕನಿಷ್ಠ ಮೂಲಭೂತ ಸೌಕರ್ಯಗಳಾದ ಅನ್ನ, ಅಕ್ಷರ, ಆರೋಗ್ಯ ಮತ್ತು ವಸತಿ ಕಲ್ಪಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಮೀನುಗಾರರ ಏಳಿಗೆಗಾಗಿ ಹಲವಾರು ಯೋಜನೆಗಳು ಜಾರಿಯಲ್ಲಿದ್ದರೂ, ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಸೂಕ್ತ ಮಾಹಿತಿಯ ಕೊರತೆಯಿಂದ ಅವು ಅರ್ಹ ಫಲಾನುಭವಿಗಳಿಗೆ ತಲುಪದೆ ಕೇವಲ ಕಾಗದಕ್ಕೆ ಸೀಮಿತವಾಗಿವೆ” ಎಂದು ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಸನ್ಮಾನ ಕಾರ್ಯಕ್ರಮದ ಬಳಿಕ ಮೀನುಗಾರರೊಂದಿಗೆ ಸಂವಾದ ನಡೆಸಲಾಯಿತು. ಈ ವೇಳೆ ಸರ್ಕಾರದಿಂದ ಸಿಗುವ ಮೀನುಗಾರಿಕೆ ಸಲಕರಣೆಗಳು, ಸಾಲ ಸೌಲಭ್ಯ, ವಿಮೆ ಹಾಗೂ ಮೀನು ಮಾರುಕಟ್ಟೆ ವ್ಯವಸ್ಥೆಯಲ್ಲಿರುವ ತೊಡಕುಗಳ ಕುರಿತು ಸುದೀರ್ಘವಾಗಿ ಚರ್ಚಿಸಲಾಯಿತು. ಮೀನುಗಾರರು ಎದುರಿಸುತ್ತಿರುವ ಪ್ರಸ್ತುತ ಸಮಸ್ಯೆಗಳು ಮತ್ತು ಅವುಗಳಿಗೆ ಕಂಡುಕೊಳ್ಳಬೇಕಾದ ಪರಿಹಾರ ಕ್ರಮಗಳ ಬಗ್ಗೆ ರೂಪುರೇಷೆ ಸಿದ್ಧಪಡಿಸಲಾಯಿತು.
ಈ ಸಂದರ್ಭದಲ್ಲಿ ಕಂಪ್ಲಿ ಕೋಟೆ ಮೀನುಗಾರರ ಸಹಕಾರ ಸಂಘದ ಉಪಾಧ್ಯಕ್ಷ ಸುರೇಶ್, ಪ್ರಧಾನ ಕಾರ್ಯದರ್ಶಿ ಮಣಿಕಂಠ, ಸ್ಥಳೀಯ ಮೀನುಗಾರರಾದ ವೆಂಕಟೇಶ, ಪ್ರದೀಪ್, ಗಿರೀಶ್, ಮಾರೆಪ್ಪ ಸೇರಿದಂತೆ ಹಲವು ಮೀನುಗಾರ ಮುಖಂಡರು ಉಪಸ್ಥಿತರಿದ್ದರು.
ವರದಿ : ಜಿಲಾನಸಾಬ್ ಬಡಿಗೇರ್




















