ಬೆಂಗಳೂರು:ಚುನಾವಣೆ ಮುಗಿದ ಆರು ತಿಂಗಳ ಬಳಿಕ ಕೊನೆಗೂ ಬಿಜೆಪಿ ರಾಜ್ಯಾಧ್ಯಕ್ಷರನ್ನು ಆಯ್ಕೆ ಮಾಡಿದ್ದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ,ಶಿಕಾರಿಪುರ ಕ್ಷೇತ್ರದ ಶಾಸಕ ಬಿ.ವೈ.ವಿಜಯೇಂದ್ರ ಅವರಿಗೆ ಅದೃಷ್ಟ ಒಲಿದಿದೆ.
ಕೂಡಲೇ ಜಾರಿಗೆ ಬರುವಂತೆ ಬಿ.ವೈ. ವಿಜಯೇಂದ್ರ ಅವರನ್ನು ರಾಜ್ಯ ಬಿಜೆಪಿಯ ನೂತನ ಸಾರಥಿಯನ್ನಾಗಿ ನೇಮಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಆದೇಶ ಹೊರಡಿಸಿದ್ದಾರೆ. ಈ ಕುರಿತು ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಧಾನಸಭಾ ಚುನಾವಣೆ ಸೋಲಿನ ಹೊಣೆ ಹೊತ್ತು ನಳಿನ್ ಕುಮಾರ್ ಕಟೀಲ್ ರಾಜೀನಾಮೆ ನೀಡಿದ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಖಾಲಿ ಬಿದ್ದಿತ್ತು. ಈ ಸ್ಥಾನಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಿ.ಟಿ. ರವಿ, ಬಸನಗೌಡ ಪಾಟೀಲ ಯತ್ನಾಳ ಮತ್ತಿತರ ಹೆಸರುಗಳು ಕೇಳಿಬರುತಿತ್ತು.
ಆದರೆ,ಸಕ್ರಿಯ ರಾಜಕಾರಣದಿಂದ ದೂರ ಉಳಿದಿದ್ದರೂ ರಾಜ್ಯ ರಾಜಕೀಯದಲ್ಲಿ ಲಿಂಗಾಯತ ಪ್ರಬಲ ನಾಯಕ ಬಿ.ಎಸ್ ಯಡಿಯೂರಪ್ಪ ಪ್ರಭಾವವನ್ನು ಮನಗಂಡ ಹೈಕಮಾಂಡ್ ಕೊನೆಗೂ ಅವರ ಪುತ್ರ ಬಿ.ವೈ.ವಿಜಯೇಂದ್ರ ಅವರನ್ನು ರಾಜ್ಯ ಬಿಜೆಪಿಯ ನೂತನ ಅಧ್ಯಕ್ಷರಾಗಿ ನೇಮಿಸಲಾಗಿದೆ. ಈ ಮೂಲಕ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಲಿಂಗಾಯತ ವೋಟ್ ಬ್ಯಾಂಕಿನತ್ತ ಚಿತ್ತ ಹರಿಸಿದೆ.
ವರದಿ:ಶಿವರಾಜ ಸಾಹುಕಾರ,ವಡಗೇರಾ
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.