ಶಿವಮೊಗ್ಗ: ಜಿಲ್ಲೆಯ ಸಚಿವ ಸ್ಥಾನದ ಪ್ರಭಲ ಆಕಾಂಕ್ಷಿಗಳಾಗಿದ್ದ ಇಬ್ಬರು ಕಾಂಗ್ರೆಸ್ ಶಾಸಕರಿಗೆ ನಿಗಮ ಮಂಡಳಿ ಅಧ‍್ಯಕ್ಷ ಸ್ಥಾನಗಳ ಜವಾಬ್ದಾರಿ ವಹಿಸುವ ಮೂಲಕ ಸಂಪುಟ ದರ್ಜೆಯ ಸ್ಥಾನಮಾನ ಕಲ್ಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಆದೇಶ ಹೊರಡಿಸಿದ್ದಾರೆ.
ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್ ರವರಿಗೆ “ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ದಿ ನಿಗಮ” (ಕೆ.ಆರ್.ಐ.ಡಿ.ಎಲ್ – ಲ್ಯಾಂಡ್ ಆರ್ಮಿ) ಅಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡಲಾಗಿದೆ.
ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ (Belur Gopalakrishna) ಅವರಿಗೆ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮ ನಿಯಮಿತದ ಅಧ‍್ಯಕ್ಷ ಸ್ಥಾನದ ಜವಾಬ್ದಾರಿ ವಹಿಸಲಾಗಿದೆ.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯ ಸಾಧಿಸಿದ್ದರು. ಮೂವರು ಕೂಡ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಗಳಾಗಿದ್ದರು. ಅದರಲ್ಲೂ ಭದ್ರಾವತಿ ಕ್ಷೇತ್ರದ ಇತಿಹಾಸದಲ್ಲಿ ಮೊದಲ ಬಾರಿಗೆ ತಮ್ಮದೇ ದಾಖಲೆ ಮುರಿದು ಬಿ ಕೆ ಸಂಗಮೇಶ್ವರ್ 4ನೇ ಬಾರಿಗೆ ಆಯ್ಕೆಯಾಗಿದ್ದಾರೆ. ಸಹಜವಾಗಿಯೇ ಕ್ಷೇತ್ರದ ಜನಸಾಮಾನ್ಯರು ಸಹ ಬಿ ಕೆ ಸಂಗಮೇಶ್ವರ್ ರವರಿಗೆ ಮಂತ್ರಿಸ್ಥಾನ ದೊರೆಯುವುದೆಂಬ ನಿರೀಕ್ಷೆಯಲ್ಲಿದ್ದರು.
ಅಂತಿಮವಾಗಿ ಸೊರಬ ಕ್ಷೇತ್ರದ ಶಾಸಕ ಮಧು ಬಂಗಾರಪ್ಪ ಅವರಿಗೆ ಸಚಿವ ಸ್ಥಾನದ ಜವಾಬ್ದಾರಿ ನೀಡಲಾಗಿತ್ತು. ಮುಂದಿನ ದಿನಗಳಲ್ಲಿ ಸರ್ಕಾರದ ಹಂತದಲ್ಲಿ ಸೂಕ್ತ ಸ್ಥಾನಮಾನ ಕಲ್ಪಿಸುವ ಭರವಸೆಯನ್ನು ಕಾಂಗ್ರೆಸ್ ವರಿಷ್ಠರು ಬಿ.ಕೆ.ಸಂಗಮೇಶ್ವರ್ ಹಾಗೂ ಬೇಳೂರು ಗೋಪಾಲಕೃಷ್ಣ ಅವರಿಗೆ ನೀಡಿದ್ದರು. ಇದೀಗ ನಿಗಮ ಮಂಡಳಿಗಳ ಜವಾಬ್ದಾರಿ ವಹಿಸಿರುವುದು ಎರಡೂ ಕ್ಷೇತ್ರಗಳ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಮುಖಂಡರಿಗೆ ಹರ್ಷ ತಂದಿದೆ. ಇನ್ನೊಂದೆಡೆ ಕ್ಷೇತ್ರದ ಜನರಲ್ಲಿ ಹೆಚ್ಚಿನ ಅಭಿವೃದ್ಧಿಯ ನಿರೀಕ್ಷೆ ಹೆಚ್ಚಿಸಿದೆ.
ವರದಿ : ಕೆ ಆರ್ ಶಂಕರ್ ಭದ್ರಾವತಿ