ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪಾಲಾರ್ ನಲ್ಲಿ ವಿದ್ಯುತ್ ಸಂಪರ್ಕಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಚಾಲನೆ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಶತಮಾನಗಳಿಂದ ಕತ್ತಲು ತುಂಬಿದ್ದ ಹಾಡಿಗಳಿಗೆ ಬೆಳಕು ನೀಡುವ ಯೋಜನೆ ಸಾಕಾರಗೊಳ್ಳುತ್ತಿದ್ದು, ಮೊದಲಿಗೆ ಮಲೆ ಮಹದೇಶ್ವರ ಬೆಟ್ಟ ವ್ಯಾಪ್ತಿಯ ಪಾಲಾರ್ ಹಾಡಿ ಇಂದು ವಿದ್ಯುತ್ ಸಂಪರ್ಕ ಪಡೆಯುವ ಮೂಲಕ ಬೆಳಕು ಕಂಡಿದೆ.

ಜಿಲ್ಲೆಯ 31 ಹಾಡಿಗಳಿಗೆ ಶಾಶ್ವತ ವಿದ್ಯುತ್ ಸಂಪರ್ಕ ಕಲ್ಪಿಸುವ ಯೋಜನೆಗೆ ಕಳೆದ ನವೆಂಬರ್ 30ರಂದು ಚಾಲನೆ ನೀಡಲಾಗಿತ್ತು. ಮೂರು ತಿಂಗಳಿನಲ್ಲಿಯೇ ಯೋಜನೆಯ ಮೊದಲ ಹಂತದಲ್ಲಿ ಪಾಲಾರ್ ಹಾಡಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಮೂಲಕ ಅತ್ಯಂತ ಕ್ಷಿಪ್ರಗತಿಯಲ್ಲಿ ಯೋಜನೆ ತಲುಪಿದೆ.

ಒಟ್ಟು 31 ಹಾಡಿಗಳಿಗೆ 42 ಕೋಟಿ ರೂ. ವೆಚ್ಚದಲ್ಲಿ 2 ಸಾವಿರಕ್ಕೂ ಹೆಚ್ಚು ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಐತಿಹಾಸಿಕ ಯೋಜನೆ ಚಾಮರಾಜನಗರ ಜಿಲ್ಲೆಯಲ್ಲಿ ಆರಂಭಗೊಂಡಿದೆ. ಇದಕ್ಕೆ ಸಾಕ್ಷಿಯಾಗಿ ಪಾಲಾರ್ ಹಾಡಿ ಇಂದು ವಿದ್ಯುತ್ ಸೌಲಭ್ಯವನ್ನು ಪಡೆದುಕೊಂಡಿದೆ.

ಪಾಲಾರ್ ಹಾಡಿಯಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸುವ ಮಹತ್ತರ ಸೇವೆಗೆ ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಡಾ. ಎಚ್.ಸಿ. ಮಹದೇವಪ್ಪ ಅವರು ಇಂದು ಚಾಲನೆ ನೀಡಿದರು.

ಪಾಲಾರ್ ಹಾಡಿಯ ಮಾದಮ್ಮ ಅವರ ಮನೆಯಲ್ಲಿ ವಿದ್ಯುತ್ ಗುಂಡಿಯನ್ನು ಒತ್ತುವ ಮೂಲಕ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ವಿದ್ಯುತ್ ಸಂಪರ್ಕ ಯೋಜನೆಯನ್ನು ವಿದ್ಯುಕ್ತವಾಗಿ ಉದ್ಘಾಟಿಸಿದರು.

ಬಳಿಕ ಸಮೀಪದಲ್ಲಿಯೇ ಆಯೋಜಿಸಲಾಗಿದ್ದ ಸಮಾರಂಭವನ್ನು ದೀಪ ಬೆಳಗಿಸುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ಉದ್ಘಾಟನೆ ನೆರವೇರಿಸಿದರು.

ಇದೇ ವೇಳೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಚಾಮರಾಜನಗರ ಜಿಲ್ಲೆಗೆ ಭೇಟಿ ನೀಡಿದ್ದ ವೇಳೆ ಹಾಡಿ, ಪೋಡುಗಳ ಜನರಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಸೂಚಿಸಿದ್ದರು. ನಾನೂ ಸಹ ಬೆಟ್ಟಕ್ಕೆ ಮೊದಲ ಬಾರಿ ಭೇಟಿ ನೀಡಿದಾಗ ಸ್ಥಳೀಯ ಹಾಡಿಗಳಿಗೆ ವಿದ್ಯುತ್ ಸಂಪರ್ಕ ಒದಗಿಸಬೇಕೆಂಬ ಬೇಡಿಕೆ ಕೇಳಿಬಂದಿತ್ತು. ಜನರಿಗೆ ಶಾಶ್ವತವಾಗಿ ವಿದ್ಯುತ್ ಸಂಪರ್ಕ ಒದಗಿಸಬೇಕೆಂಬ ನಿರ್ಧಾರವನ್ನು ಸರ್ಕಾರ ಕೈಗೊಂಡು ಅದರಂತೆ ಯೋಜನೆಗೆ ಚಾಲನೆ ನೀಡಲಾಗಿತ್ತು. ಇಂದು ಯಶಸ್ವಿಯಾಗಿ ಪಾಲಾರ್‍ನಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದೇವೆ ಎಂದರು.

ಜಿಲ್ಲೆಯ ಎಲ್ಲಾ 31 ಹಾಡಿಗಳಿಗೂ ವಿದ್ಯುತ್ ಸಂಪರ್ಕ ಒದಗಿಸಲಿದ್ದೇವೆ. ಕಾಮಗಾರಿ ನಡೆಯುತ್ತಿದ್ದು, 2 ರಿಂದ 3 ತಿಂಗಳಲ್ಲಿ ಸಂಪೂರ್ಣವಾಗಿ ಎಲ್ಲಾ ಹಾಡಿಗಳಿಗೆ ವಿದ್ಯುತ್ ಸಂಪರ್ಕ ನೀಡುವ ಕಾರ್ಯ ಪೂರ್ಣವಾಗಲಿದೆ. ಯೋಜನೆ ಫಲಪ್ರದ ಜಾರಿಗೆ ಮುಖ್ಯಮಂತ್ರಿಗಳು, ಸಚಿವರು, ಶಾಸಕರು, ಅಧಿಕಾರಿಗಳು ಕಾರಣರಾಗಿದ್ದಾರೆ ಎಂದು ಉಸ್ತುವಾರಿ ಸಚಿವರು ತಿಳಿಸಿದರು.

ಸುಮಾರು 12 ಕೋಟಿ ರೂ. ವೆಚ್ಚದಲ್ಲಿ ಹಾಡಿಗಳಲ್ಲಿ 123 ಕಿ.ಮೀ. ರಸ್ತೆ ನಿರ್ಮಾಣಕ್ಕಾಗಿ ಈಗಾಗಲೇ ಪ್ರಸ್ತಾವನೆ ಸಲ್ಲಿಕೆಯಾಗಿದ್ದು, ಈ ಕಾರ್ಯವು ಶೀಘ್ರದಲ್ಲಿಯೇ ಆಗಲಿದೆ. ಹಾಡಿ, ಪೋಡುಗಳ ಅರಣ್ಯವಾಸಿಗಳಿಗೆ ಮೂಲ ಸೌಕರ್ಯ ಒದಗಿಸಲು ಸರ್ಕಾರ ಬದ್ಧವಾಗಿದೆ. ಶಾಶ್ವತ ವಿದ್ಯುತ್ ಒದಗಿಸುವ ಕಾರ್ಯ ನೆರವೇರಿರುವುದರಿಂದ ನಾವು ಮಾಡಿದ ಕೆಲಸ ಸಾರ್ಥಕ ಎನಿಸಿದೆ. ಜನರ ಅಗತ್ಯಗಳಿಗೆ ಎಲ್ಲಾ ರೀತಿಯ ಸ್ಪಂದನೆ ಸಿಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ಹೇಳಿದರು.

ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಡಾ. ಎಚ್.ಸಿ. ಮಹದೇವಪ್ಪ ಅವರು ಮಾತನಾಡಿ ಅರಣ್ಯವಾಸಿಗಳು, ಕಾಡಂಚಿನ ಜನರು, ಎಲ್ಲಾ ವರ್ಗದ ಬಡವರ ಮುಖದಲ್ಲಿ ನಗು ಕಾಣಬೇಕು. ಅವರಿಗೆ ಪೂರಕವಾಗಿರುವ ಮೂಲ ಸೌಲಭ್ಯಗಳನ್ನು ಕಲ್ಪಿಸುವುದು ನಮ್ಮ ಹೊಣೆಗಾರಿಕೆಯಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ ಎಲ್ಲಾ ಅವಶ್ಯಕ ಕ್ರಮಗಳಿಗೆ ಅದ್ಯತೆ ನೀಡಿದೆ ಎಂದರು.

ಹಾಡಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಐತಿಹಾಸಿಕ ಯೋಜನೆಯನ್ನು ಚಾಮರಾಜನಗರ ಜಿಲ್ಲೆಯಲ್ಲಿ ಯಶಸ್ವಿಯಾಗಿ ಇಂದು ಪಾಲಾರ್‍ ನಲ್ಲಿ ಜಾರಿ ಮಾಡಿದ್ದೇವೆ. ಪಾಲಾರ್ ಹಾಡಿಯ 75 ಮನೆಗಳಿಗೆ ಶಾಶ್ವತ ವಿದ್ಯುತ್ ಸಂಪರ್ಕವನ್ನು ಅಂಡರ್ ಗ್ರೌಂಡ್ ಕೇಬಲ್ ಮೂಲಕ ಸುರಕ್ಷಿತವಾಗಿ ಅಳವಡಿಸಲಾಗಿದೆ. ಕಾಡಿನ ಸಂರಕ್ಷಣೆ ಮಾಡುವ ಅರಣ್ಯವಾಸಿಗಳಿಗೆ ಎಲ್ಲಾ ಸವಲತ್ತುಗಳನ್ನು ತಲುಪಿಸುವುದು ಸರ್ಕಾರದ ದೃಢಸಂಕಲ್ಪವಾಗಿದೆ ಎಂದು ಸಚಿವರಾದ ಡಾ. ಎಚ್. ಸಿ. ಮಹದೇವಪ್ಪ ಅವರು ತಿಳಿಸಿದರು.

ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಅಧ್ಯಕ್ಷರಾದ ರಮೇಶ್ ಬಂಡಿಸಿದ್ದೇಗೌಡ ಅವರು ಮಾತನಾಡಿ ಹಾಡಿಗಳಿಗೆ ವಿದ್ಯುತ್ ಸಂಪರ್ಕವನ್ನು ಕಲ್ಪಿಸುವ ಯೋಜನೆ ಅನುಷ್ಠಾನವಾಗುತ್ತಿರುವುದು ಇಡೀ ರಾಜ್ಯ, ದೇಶದಲ್ಲಿಯೇ ಚಾಮರಾಜನಗರ ಜಿಲ್ಲೆ ಪ್ರಥಮವಾಗಿದೆ. ಮುಖ್ಯಮಂತ್ರಿಗಳು ಸೇರಿದಂತೆ ಎಲ್ಲರ ಸಹಕಾರದಿಂದ ಈ ಕೆಲಸ ಸಾಧ್ಯವಾಗಿದೆ ಎಂದರು.

ಶಾಸಕರಾದ ಎಂ.ಆರ್. ಮಂಜುನಾಥ್ ಅವರು ಮಾತನಾಡಿ ಹಾಡಿಗಳಿಗೆ ವಿದ್ಯುತ್ ಕಲ್ಪಿಸಿರುವ ಇಂದು ಅತ್ಯಂತ ಸ್ಮರಣೀಯ ಸುದಿನವಾಗಿದೆ. ಅರಣ್ಯವಾಸಿಗಳಿಗೆ ಬೆಳಕು ಕೊಡುವ ಮಹತ್ತರ ಕಾರ್ಯ ನೆರವೇರಿರುವುದು ನನಗೆ ಅತೀವ ಸಂತಸವಾಗಿದೆ. ರಸ್ತೆಗಳ ನಿರ್ಮಾಣ ಕಾರ್ಯವು ಸಹ ಶೀಘ್ರವಾಗಿ ನೆರವೇರಲೆಂದು ಆಶಿಸುವುದಾಗಿ ಹೇಳಿದರು.
ಶಾಸಕರಾದ ಎ.ಆರ್. ಕೃಷ್ಣಮೂರ್ತಿ, ಮಾಜಿ ಶಾಸಕರಾದ ಆರ್. ನರೇಂದ್ರ, ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಮುನಿರಾಜ್ ಗೋಪಾಲ್, ಈ ಹಿಂದಿನ ವ್ಯವಸ್ಥಾಪಕ ನಿರ್ದೇಶಕರಾದ ಶೀಲ, ಉಪವಿಭಾಗಾಧಿಕಾರಿ ಮಹೇಶ್, ನಿಗಮದ ಹಿರಿಯ ಎಂಜಿನಿಯರ್ ಗಳಾದ ದಿವಾಕರ್, ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪರಮೇಶ್ವರ್, ತಹಶೀಲ್ದಾರ್ ಗುರುಪ್ರಸಾದ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಬಿಂದ್ಯಾ ಇನ್ನಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ವರದಿ: ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!