ಶಿವಮೊಗ್ಗ/ ಭದ್ರಾವತಿ: ಲಕ್ಷಾಂತರ ಮಕ್ಕಳಿಗೆ ಆಶ್ರಯ, ಅನ್ನ ,ಅಕ್ಷರ ನೀಡಿದ ನಡೆದಾಡುವ ದೇವರು ಎಂದೇ ಪ್ರಸಿದ್ದವಾಗಿದ್ದ ಕರ್ನಾಟಕ ರತ್ನ ತ್ರಿವಿಧ ದಾಸೋಹಿ ತುಮಕೂರು ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಜನ್ಮದಿನವನ್ನು ತಾಲ್ಲೂಕು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಶ್ರೀ ಶಿವಕುಮಾರ ಸ್ವಾಮೀಜಿಯವರ ಜನ್ಮ ದಿನಾಚರಣೆ ಅಂಗವಾಗಿ ಹಳೇನಗರದ ಸಾರ್ವಜನಿಕ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು, ಹಂಪಲು ವಿತರಿಸಲಾಯಿತು.
ಮಹಾಸಭಾದ ತಾಲ್ಲೂಕು ಅಧ್ಯಕ್ಷ ಕೆ ಎಸ್ ವಿಜಯ್ ಕುಮಾರ್ ರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ಪಿ ಎಲ್ ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ ಶಿವಕುಮಾರ್ ಆಗಮಿಸಿ ಶ್ರೀ ಶಿವಕುಮಾರ ಸ್ವಾಮಿಗಳು ಲಕ್ಷಾಂತರ ವಿದ್ಯಾರ್ಥಿಗಳಿಗೆ ಆಶ್ರಯ ನೀಡಿ ಅನ್ನ ದಾಸೋಹ, ಅಕ್ಷರ ದಾಸೋಹದ ಮೂಲಕ ಜಗತ್ತಿನೆಲ್ಲೆಡೆ ಪ್ರಸಿದ್ಧಿ ಹೊಂದಿದವರು, ಇಂತಹ ಮಹನೀಯರ ಆದರ್ಶಗಳನ್ನು ಎಲ್ಲರೂ ಅಳವಡಿಸಿಕೊಳ್ಳಬೇಕೆಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ನಿರ್ದೇಶಕರು, ತಾಲ್ಲೂಕು ಮಹಾಸಭಾದ ವಿವಿಧ ಘಟಕಗಳ ಪದಾಧಿಕಾರಿಗಳು, ನಿರ್ದೇಶಕರು,
ಆಸ್ಪತ್ರೆಯ ವೈದ್ಯಾಧಿಕಾರಿಗಳು, ಸಿದ್ದಾರೂಢ ಮಠದ ಕಾರ್ಯದರ್ಶಿ ರಾಮಮೂರ್ತಿ ಸೇರಿದಂತೆ ಸಮಾಜ ಬಾಂಧವರು ಪಾಲ್ಗೊಂಡಿದ್ದರು.
ವರದಿ: ಕೆ ಆರ್ ಶಂಕರ್ ಭದ್ರಾವತಿ
