
ಕೊಪ್ಪಳ: ಜಿಲ್ಲಾ ಆಡಳಿತ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೊಪ್ಪಳ ಹಾಗೂ ಕರ್ನಾಟಕ ರಾಜ್ಯ ಚೆಸ್ ಅಸೋಸಿಯೇಷನ್ ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಿದ ಚೆಸ್ ತರಬೇತಿ ( ಬೇಸಿಕ್ ) ಹಾಗೂ 2025ನೇ ಸಾಲಿನ ರಾಜ್ಯಮಟ್ಟದ ಚೆಸ್ ಸ್ಪರ್ಧೆಯ ಆಯ್ಕೆ ಪ್ರಕ್ರಿಯೆಯ ಚೆಸ್ ಸ್ಪರ್ಧೆಯಲ್ಲಿ ಕಿಡದಾಳ ಶ್ರೀ ಶಾರದಾ ಇಂಟರ್ನ್ಯಾಷನಲ್ ಶಾಲೆಯ ವಿದ್ಯಾರ್ಥಿನಿ ಚಿನ್ಮಯಿ ತಿರುಪತಿ ಶಿವನಗುತ್ತಿ ತೃತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ವಿವಿಧ ವಯೋಮಾನದವರಿಗಾಗಿ ಪ್ರತ್ಯೇಕ ಸ್ಪರ್ಧೆಗಳನ್ನು ನಡೆಸಲಾಗಿದ್ದು, 15 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ಸೃಜನಾ, ಮೇಘನಾ ವಿ, ಸಿಂಧುಜಾ ಆರ್ ಬಿ ಹಾಗೂ ಚಿನ್ಮಯಿ ತಿರುಪತಿ ಶಿವನಗುತ್ತಿ ವಿಜೇತರಾಗಿದ್ದು ರಾಜ್ಯಮಟ್ಟದಲ್ಲಿ ನಡೆಯುವ ಸ್ಪರ್ಧೆಗೆ ಭಾಗವಹಿಸುವ ಅರ್ಹತೆಯನ್ನು ಪಡೆದುಕೊಂಡಿದ್ದಾರೆ. ಇದೇ ತಿಂಗಳು 23 ರಿಂದ 25 ರವರೆಗೆ ಉಡುಪಿಯಲ್ಲಿ ನಡೆಯುವ ರಾಜ್ಯಮಟ್ಟದ ಚೆಸ್ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವಿಠ್ಠಲ ಜಾಬಗೌಡರ ತಿಳಿಸಿದ್ದಾರೆ. ವಿದ್ಯಾರ್ಥಿನಿಯ ಈ ಸಾಧನೆಗೆ ಶಾಲೆಯ ಆಡಳಿತ ಮಂಡಳಿ, ಪ್ರಾಚಾರ್ಯರು ಮತ್ತು ಶಿಕ್ಷಕ ಸಿಬ್ಬಂದಿ ವರ್ಗ ಹರ್ಷ ವ್ಯಕ್ತಪಡಿಸಿದ್ದಾರೆ.
- ಕರುನಾಡ ಕಂದ




















