ಬೆಂಗಳೂರು : ವರ್ಗಾವಣೆ ನಿರೀಕ್ಷೆಯಲ್ಲಿದ್ದ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ರಾಜ್ಯ ಸರ್ಕಾರಿ ಅಧಿಕಾರಿಗಳ ವರ್ಗಾವಣೆ ಅವಧಿಯನ್ನು ವಿಸ್ತರಿಸಲಾಗಿದೆ. ಈ ಮೊದಲು ಷರತ್ತುಗಳಿಗೊಳಪಟ್ಟು ಮೇ 12 ರಿಂದ ಜೂನ್ 14ರವರೆಗೆ ವರ್ಗಾವಣೆ ಕೈಗೊಳ್ಳಲು ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ ರಾಜ್ಯ ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಆಯಾ ಇಲಾಖಾ ಸಚಿವರಿಗೆ ಹಾಗೂ ಗ್ರೂಪ್-ಸಿ ಮತ್ತು ಗ್ರೂಪ್-ಡಿ ವೃಂದದ ನೌಕರರಿಗೆ ಸಂಬಂಧಿಸಿದಂತೆ ಆಯಾ ನೇಮಕಾತಿ ಪ್ರಾಧಿಕಾರಗಳಿಗೆ ಅಧಿಕಾರ ಪ್ರತ್ಯಾಯೋಜಿಸಿ ಆದೇಶಿಸಲಾಗಿತ್ತು. ಆದ್ರೆ, ಇದೀಗ ಎಲ್ಲಿಯವರೆಗೆ ವಿಸ್ತರಣೆ ಮಾಡಲಾಗಿದೆ ಎನ್ನುವ ಮಾಹಿತಿ ಇಲ್ಲಿದೆ.
ಕರ್ನಾಟಕ ರಾಜ್ಯ ಸರ್ಕಾರಿ ಅಧಿಕಾರಿಗಳ (government employees) ವರ್ಗಾವಣೆ ಅವಧಿಯನ್ನು ವಿಸ್ತರಿಸಲಾಗಿದೆ. ಸರ್ಕಾರಿ ನೌಕರರ ವರ್ಗಾವಣೆ (Transfer guidelines) ಕೈಗೊಳ್ಳಲು ನಿಗದಿಪಡಿಸಿದ್ದ ಅವಧಿಯನ್ನು ಜೂನ್ 30ರವರೆಗೆ ವಿಸ್ತರಿಸಲಾಗಿದ್ದು, ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಪ್ರತಿಭಾ. ಕೆ ಅವರು ಇಂದು (ಜೂನ್ 17) ಆದೇಶ ಹೊರಡಿಸಿದ್ದಾರೆ. ಇದರೊಂದಿಗೆ ವರ್ಗಾವಣೆ ನಿರೀಕ್ಷೆಯಲ್ಲಿದ್ದ ರಾಜ್ಯ ಸರ್ಕಾರಿ ನೌಕರರಿಗೆ ಅನುಕೂಲವಾಗಲಿದೆ.
ವರದಿ : ಜಿಲಾನಸಾಬ್ ಬಡಿಗೇರ್
