ವಿಶಾಖಪಟ್ಟಣಂ: ಇಡೀ ಜಗತ್ತಿನಾದ್ಯಂತ ಇಂದು (ಜೂನ್ 21-ಶನಿವಾರ) ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದ್ದು, ಭಾರತದಲ್ಲಿ ಕೂಡಾ ಯೋಗ ದಿನಾಚರಣೆಯ ಸಂಭ್ರಮ ಮನೆ ಮಾಡಿದೆ.
ಅದರಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ನಡೆಯಲಿರುವ ಭವ್ಯ ಯೋಗ ದಿನಾಚರಣೆ ಸಮಾರಂಭದಲ್ಲಿ ಭಾಗವಹಿಸಲಿದ್ದು, ಈ ಕಾರ್ಯಕ್ರಮಕ್ಕಾಗಿ ಸಕಲ ಸಿದ್ಧತೆ ಪೂರ್ಣಗೊಂಡಿದೆ. ಈ ಸಾಮೂಹಿಕ ಯೋಗ ಪ್ರದರ್ಶನದಲ್ಲಿ ಸುಮಾರು 5 ಲಕ್ಷ ಜನ ಸೇರುವ ನಿರೀಕ್ಷೆ ಇದೆ.
ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಬಂತೆಂದರೆ ಇಡೀ ಜಗತ್ತೇ ಭಾರತದತ್ತ ತಿರುಗಿ ನೋಡುತ್ತದೆ. ಮಾನಸಿಕ ಮತ್ತು ದೈಹಿಕ ಆರೋಗ್ಯ ಕಾಪಾಡಿಕೊಳ್ಳುವ ಅತ್ಯಂತ ಸರಳ ಮತ್ತು ಪುರಾತನ ಭಾರತೀಯ ವಿದ್ಯೆಯಾದ ಯೋಗ, ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಮೂಲಕ ಜಗತ್ತಿನ ಮೂಲೆ ಮೂಲೆಯನ್ನು ತಲುಪಿದೆ.
ಅದರಂತೆ ಈ ಬಾರಿ ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆ 2025 ಸಮಾರಂಭದಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ. ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ನೇತೃತ್ವದ ಆಂಧ್ರಪ್ರದೇಶ ಸರ್ಕಾರ, ಅಂತಾರಾಷ್ಟ್ರೀಯ
ಯೋಗ ದಿನಾಚರಣೆ 2025ನ್ನು ಅದ್ಧೂರಿಯಾಗಿ ಆಚರಿಸಲು ಸಕಲ ಸಿದ್ಧತೆಯನ್ನು ಪೂರ್ಣಗೊಳಿಸಿದೆ.
ವರದಿ : ಜಿಲಾನಸಾಬ್ ಬಡಿಗೇರ್




















