ಕಲಬುರಗಿ/ ಕಮಲಾಪೂರ: ಗ್ರಾ. ಪಂ. ಆಡಳಿತ ಅವಧಿ ಮುಗಿಯುತ್ತಿರುವ ಗ್ರಾಮ ಪಂಚಾಯತಿಗಳಿಗೆ ಈಗಿರುವ ಆಡಳಿತ ಸಮಿತಿಯನ್ನು ಮರು ನೇಮಕ ಮಾಡಲು ತಾಲೂಕಿನ ಡೊಂಗರಗಾಂವ ಗ್ರಾಮ ಪಂಚಾಯಿತಿ ಅಧ್ಯಕ್ಷ ಅನೀಲಕುಮಾರ ಬೆಳಕೇರಿ ಅವರು ಅವರು ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ಕರ್ನಾಟಕ ಸರ್ಕಾರವು ಆದೇಶ ಹೊರಡಿಸಿ ಆಡಳಿತಾಧಿಕಾರಿಗಳನ್ನು ನೇಮಿಸುವಂತೆ ಜಿಲ್ಲಾಧಿಕಾರಿಗಳಿಗೆ ಆದೇಶಿಸಿದೆ, ಆದರೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜಾಪ್ರತಿನಿಧಿಗಳಿಗೆ ಅವಕಾಶ ನೀಡದೆ ಅಧಿಕಾರಿಗಳಿಗೆ ಆಡಳಿತನಡೆಸುವ ಅವಕಾಶ ನೀಡುವುದು ಪ್ರಜಾಪ್ರಭುತ್ವ ವಿರೋಧಿ ಎಂದು ಅವರು ತೀವ್ರವಾಗಿ ಖಂಡಿಸಿದ್ದಾರೆ.
ರಾಜ್ಯ ಸರ್ಕಾರವು ಆದೇಶ ಹೊರಡಿಸಿ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ರ ಪ್ರಕರಣ 8(1)ಬಿ(೨) ರನ್ವಯ ಆಡಳಿತಾವಧಿ ಮುಗಿಯುತ್ತಿರುವಗ್ರಾಮ ಪಂಚಾಯತಿಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸುವಂತೆ ಜಿಲ್ಲಾಧಿಕಾರಿಗಳಿಗೆ ಆದೇಶಿಸಿರುತ್ತದೆ. ಆದರೆ, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ರ ಪ್ರಕರಣ 8(1)ಬಿ(ಎ) ರ ಅನ್ವಯ ಚುನಾಯಿತರಾಗಲು ಅರ್ಹರಾದ ವ್ಯಕ್ತಿಗಳನ್ನೊಳಗೊಂಡ ಆಡಳಿತ ಸಮಿತಿಯನ್ನು ನೇಮಕ ಮಾಡಲು ಅವಕಾಶವಿರುತ್ತದೆ.
ರಾಜ್ಯ ಸರ್ಕಾರವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜಾಪ್ರತಿನಿಧಿಗಳಿಗೆ ಅವಕಾಶ ನೀಡದೆ, ಅಧಿಕಾರಿಗಳಿಗೆ ಆಡಳಿತ ನಡೆಸುವ ಅವಕಾಶ ನೀಡುವ ಮೂಲಕ ಪ್ರಜಾಪ್ರಭುತ್ವ ವಿರೋದಿ ನಡೆಯನ್ನು ನಡೆಯುತ್ತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.
ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ ಖರ್ಗೆ ಅವರನ್ನು ನೆನಪಿಸಿ, 2020ರಲ್ಲಿ ಕೋವಿಡ್ ಕಾರಣದಿಂದಾಗಿ ಗ್ರಾಮ ಪಂಚಾಯತಿಗಳ ಅವಧಿ ಮುಕ್ತಾಯವಾದಾಗ ಆಡಳಿತ ಸಮಿತಿಯ ಅವಧಿಯನ್ನು ವಿಸ್ತರಿಸಬೇಕೆಂದು ಒತ್ತಾಯಿಸಿದ್ದನ್ನು ಉಲ್ಲೇಖಿಸಿದ್ದಾರೆ. ಸರ್ಕಾರವು ಗ್ರಾಮ ಪಂಚಾಯತಿಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸುವ ಪ್ರಜಾಪ್ರಭುತ್ವವಿರೋಧಿ ಆದೇಶವನ್ನು ಹಿಂಪಡೆದು ಕಾಯ್ದೆಯ ಅನ್ವಯ ಆಡಳಿತಾವಧಿ ಕೊನೆಗೊಳ್ಳುತ್ತಿರುವ ಆಡಳಿತ ಸಮಿತಿಯನ್ನು ಪುನರ್ ನೇಮಕ ಮಾಡಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- ಕರುನಾಡ ಕಂದ ಪತ್ರಿಕೆ




















