ವಿಜಯನಗರ / ಹಂಪಿ : ವಿಶ್ವವಿಖ್ಯಾತ ಹಂಪಿ ಉತ್ಸವದ ಉದ್ಘಾಟನಾ ಸಮಾರಂಭದಲ್ಲಿ ಭಾರೀ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೇದಿಕೆಯ ಮೇಲೆ ಪೂಜೆ ಸಲ್ಲಿಸುತ್ತಿದ್ದ ಸಂದರ್ಭದಲ್ಲೇ ಪಟಾಕಿ ಕಿಡಿ ತಾಗಿ ವೇದಿಕೆಯ ಬಲಭಾಗದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.
ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಹಂಪಿಯಲ್ಲಿ ಅದ್ಧೂರಿ ‘ಹಂಪಿ ಉತ್ಸವ’ಕ್ಕೆ ಚಾಲನೆ ನೀಡಲಾಗುತ್ತಿದ್ದ ಸಮಯದಲ್ಲಿ ಮುಖ್ಯ ವೇದಿಕೆಯ ಮೇಲೆ ಮುಖ್ಯಮಂತ್ರಿಗಳು ಸಾಂಪ್ರದಾಯಿಕ ಪೂಜೆ ಸಲ್ಲಿಸಿ ಉತ್ಸವಕ್ಕೆ ಚಾಲನೆ ನೀಡುತ್ತಿದ್ದರು. ಈ ವೇಳೆ ಸಿಡಿಸಿದ ಪಟಾಕಿಯ ಕಿಡಿಯೊಂದು ವೇದಿಕೆಯ ಪಕ್ಕಕ್ಕೆ ಸಿಡಿದು, ಕ್ಷಣಾರ್ಧದಲ್ಲಿ ಬೆಂಕಿ ಹೊತ್ತಿಕೊಂಡು, ದಟ್ಟ ಹೊಗೆ ಆವರಿಸಿಕೊಂಡಿತು. ವೇದಿಕೆಯ ಸಮೀಪವೇ ಬೆಂಕಿ ಮತ್ತು ದಟ್ಟ ಹೊಗೆ ಕಾಣಿಸಿಕೊಳ್ಳುತ್ತಿದ್ದಂತೆ ನೆರೆದಿದ್ದ ಸಾವಿರಾರು ಪ್ರೇಕ್ಷಕರು ಹಾಗೂ ಗಣ್ಯರು ಆತಂಕಗೊಂಡಿದ್ದಾರೆ. ಆದರೆ, ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣವೇ ಕಾರ್ಯಪ್ರವೃತ್ತರಾಗಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಸಕಾಲಕ್ಕೆ ಸಿಬ್ಬಂದಿ ಎಚ್ಚೆತ್ತಿದ್ದರಿಂದ ಸಂಭವಿಸಬಹುದಾದ ದೊಡ್ಡ ಅನಾಹುತವೊಂದು ತಪ್ಪಿದೆ.
ವರದಿ : ಜಿಲಾನಸಾಬ್ ಬಡಿಗೇರ್



















