ಉತ್ತರ ಕನ್ನಡ ಜಿಲ್ಲೆಯ ಕಾರವಾರಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಖಚಿತವಾಗಿ ಮಂಜೂರು ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗಟ್ಟಿ ಧ್ವನಿಯಲ್ಲಿ ಘೋಷಿಸಿದರು.
ದಿನಾಂಕ:22.02.2026 ರವಿವಾರ ನಗರದ ಕ್ರಿಮ್ಸ್ ಆವರಣದಲ್ಲಿ ನಡೆದ ನೂತನ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಿಲ್ಲೆಗೆ ಅತ್ಯಾಧುನಿಕ ಆರೋಗ್ಯ ಸೌಲಭ್ಯಗಳ ಅಗತ್ಯತೆ ಬಹುಕಾಲದಿಂದ ಕೇಳಿಬರುತ್ತಿದ್ದು, ಇದಕ್ಕೆ ಸರ್ಕಾರ ಸ್ಪಂದಿಸಿದೆ ಎಂದರು. ಈಗಾಗಲೇ ಹಲವು ಸಂಘಟನೆಗಳು, ಜನಸಾಮಾನ್ಯರು, ಶಾಸಕರುಗಳು, ಸಚಿವರು, ಸೇರಿದಂತೆ ಹಲವರು ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸುವಂತೆ ಮನವಿ ಸಲ್ಲಿಸಿದ್ದರು. ಈ ಬೇಡಿಕೆಯನ್ನು ಮುಂದಿನ ಆಯವ್ಯಯದಲ್ಲಿ ಅಧಿಕೃತವಾಗಿ ಘೋಷಣೆ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದರು.
ಪ್ರತಿ ಜಿಲ್ಲೆಯಲ್ಲಿಯೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಸ್ಥಾಪಿಸುವುದು ರಾಜ್ಯ ಸರ್ಕಾರದ ಉದ್ದೇಶವಾಗಿದೆ. ಅದರ ಭಾಗವಾಗಿ ಕಾರವಾರಕ್ಕೂ ಆದ್ಯತೆ ನೀಡಲಾಗುತ್ತಿದೆ ಎಂದು ಹೇಳಿದರು. ಮುಂದಿನ ಆರ್ಥಿಕ ವರ್ಷದಲ್ಲೇ ಕಾಮಗಾರಿ ಪ್ರಾರಂಭವಾಗಿ, ಆಸ್ಪತ್ರೆ ಪೂರ್ಣಗೊಂಡ ಬಳಿಕ ನಾನೇ ಉದ್ಘಾಟನೆ ಮಾಡುತ್ತೇನೆ ಎಂಬ ವಿಶ್ವಾಸವನ್ನೂ ವ್ಯಕ್ತಪಡಿಸಿದರು.
ಈ ವೇಳೆ ಹಿಂದಿನ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಬಿಜೆಪಿ ಆಡಳಿತದಲ್ಲಿ ಜಿಲ್ಲೆಗೆ ಅಗತ್ಯವಾದ ಅಭಿವೃದ್ಧಿ ಕಾರ್ಯಗಳು ನಡೆಯಲಿಲ್ಲ ಎಂದು ಆರೋಪಿಸಿದರು. ಪ್ರಸ್ತುತ ಸರ್ಕಾರ ಅಭಿವೃದ್ಧಿಗೆ ಬದ್ಧವಾಗಿದ್ದು, ಆದ್ಯತೆ ಆಧಾರದಲ್ಲಿ ಉಳಗಾ–ಕೆರವಡಿ ಸೇತುವೆ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು ಎಂದು ಭರವಸೆ ನೀಡಿದರು. ಇದಕ್ಕಾಗಿ ಅಗತ್ಯ ಅನುದಾನವನ್ನು ಮಂಜೂರು ಮಾಡಲಾಗುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಚಿವರು, ಜನಪ್ರತಿನಿಧಿಗಳು ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ಮುಖ್ಯಮಂತ್ರಿ ಘೋಷಣೆಯಿಂದ ಜಿಲ್ಲೆಯ ಜನರಲ್ಲಿ ಹೊಸ ಆಶಾಭಾವನೆ ಮೂಡಿದೆ.
ವರದಿ :ವಿನಾಯಕ ಆಚಾರಿ ಹೊನ್ನಾವರ



















