ಬಳ್ಳಾರಿ : ಜಿಲ್ಲೆಯ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿ ಹನುಮಂತು (25) ಎಂಬುವರು ಮೃತಪಟ್ಟ ಘಟನೆ ಬೆಳಕಿಗೆ ಬಂದಿದೆ. ವೈದ್ಯರು ಹಾಗೂ ಜೈಲು ಸಿಬ್ಬಂದಿಯ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ.
ಮೃತ ಹನುಮಂತು ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಸಂಕನಾಳು ಗ್ರಾಮದ ನಿವಾಸಿ. ಜೀವಾವಧಿ ಶಿಕ್ಷೆಗೆ ಗುರಿಯಾಗಿ ಕಳೆದ ಜನವರಿಯಲ್ಲಿ ರಾಯಚೂರು ಜಿಲ್ಲೆಯಿಂದ ಬಳ್ಳಾರಿ ಜೈಲಿಗೆ ವರ್ಗಾವಣೆಗೊಂಡಿದ್ದ. ಏಪ್ರಿಲ್ 29ರಂದು ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಹನುಮಂತುನನ್ನು ಬಳ್ಳಾರಿ ಜೈಲಿನಿಂದ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಕಳೆದ ಒಂದು ವಾರದಿಂದ ಆತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿಚಾರವನ್ನು ಕುಟುಂಬಸ್ಥರಿಗೆ ತಿಳಿಸಿರಲಿಲ್ಲ ಎಂದು ಆರೋಪಿಸಲಾಗಿದೆ.
ಈ ಕುರಿತು ಮೃತನ ತಂಗಿ ಮರಿಯಮ್ಮ ಎಂಬುವರು ಮಾತನಾಡಿದ್ದು, ಮೇ 6ರಂದು ನಮ್ಮ ಅಣ್ಣ ಮೃತಪಟ್ಟ ನಂತರವೇ ರಾತ್ರಿ 12 ಗಂಟೆ ಸುಮಾರಿಗೆ ಪೊಲೀಸರು ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಆತ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ವಿಚಾರವೇ ನಮಗೆ ಗೊತ್ತಿರಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಂಬಂಧಿಕರಾದ ದೇವಪ್ಪ ಎಂಬುವರು ಮಾತನಾಡಿ, ‘ಕೈದಿ ಹನುಮಂತು ಅವರು ಆರೋಗ್ಯ ಸರಿಯಿಲ್ಲ ಎಂಬುದಾಗಿ ಹೇಳಿಕೊಂಡು ಆಸ್ಪತ್ರೆಗೆ ಬಂದಿದ್ದರು. ಅವರ ತಂಗಿ ಬೆಂಗಳೂರಿನಲ್ಲಿ ಇದ್ದರು. ಡಾಕ್ಟರ್ಗಳು ಕೈದಿಯ ಆರೋಗ್ಯ ಸೀರಿಯಸ್ ಆಗಿದೆ ಎಂದು ಪೊಲೀಸರಿಗೆ ಹೇಳಿದ್ದಾರೆ. ಪೊಲೀಸರು ಕುಟುಂಬದವರಿಗೆ ಮಾಹಿತಿ ನೀಡಿಲ್ಲ. ಅವರು ಹೇಳಿದ್ದರೆ ಖಾಸಗಿ ಆಸ್ಪತ್ರೆಗೆ ಬಂದು ತೋರಿಸಬಹುದಿತ್ತು. ಸಾವಿಗೆ ಪೊಲೀಸರು ಹಾಗೂ ಡಾಕ್ಟರ್ ಕಾರಣ’ ಎಂದು ಆರೋಪಿಸಿದ್ದಾರೆ.
ನಮ್ಮ ಅಣ್ಣ ಕಳೆದ ನಾಲ್ಕು ತಿಂಗಳಿಂದ ಬಳ್ಳಾರಿ ಜೈಲಿನಲ್ಲಿ ಸುಸ್ಥಿತಿಯಲ್ಲಿದ್ದ. ಇದೀಗ ಏಕಾಏಕಿ ಮೃತಪಟ್ಟಿರುವುದು ಅನುಮಾನಕ್ಕೆ ಕಾರಣವಾಗಿದೆ. ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ ನಮಗೆ ನ್ಯಾಯ ಒದಗಿಸಬೇಕು ಎಂದು ಕುಟುಂಬಸ್ಥರು ಒತ್ತಾಯಿಸಿದ್ದಾರೆ.
ವರದಿ : ಜಿಲಾನಸಾಬ್ ಬಡಿಗೇರ್




















