
ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ: ಕೆ.ಜಿ.ಬೋಪಯ್ಯ
ಮಡಿಕೇರಿ : ಕನ್ನಡ ಭಾಷೆ, ನಾಡು-ನುಡಿ ಬಗ್ಗೆ ಪ್ರತಿಯೊಬ್ಬರಲ್ಲೂ ಅಭಿಮಾನ ಮತ್ತು ಸ್ವಾಭಿಮಾನ ಇರಬೇಕು ಎಂದು ವಿಧಾನಸಭೆಯ ಮಾಜಿ ಸಭಾಧ್ಯಕ್ಷರಾದ ಕೆ.ಜಿ.ಬೋಪಯ್ಯ ಅವರು ತಿಳಿಸಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಕಡಂಗ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದ ಹರದಾಸ ಅಪ್ಪನೆರವಂಡ ಅಪ್ಪಚ್ಚ ಕವಿ ವೇದಿಕೆಯಲ್ಲಿ ನಡೆದ ತಾಲ್ಲೂಕಿನ 12ನೇ ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕರ್ನಾಟಕದಲ್ಲಿ ಕನ್ನಡ ಭಾಷೆಗೆ ಮೊದಲ ಸ್ಥಾನ. ಆದರೆ ವಾಸ್ತವ ಪರಿಸ್ಥಿತಿ ಹೇಗಿದೆ ಎಂಬುದನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳುವಂತಾಗಬೇಕು ಎಂದರು.
ಗ್ರಾಮೀಣ ಪ್ರದೇಶದಲ್ಲಿ ಇಂದಿಗೂ ಸಹ ಸ್ಥಳೀಯ ಹಾಗೂ ನಾಡಿನ ಭಾಷೆಗಳು ಬಲಯುತವಾಗಿದೆ. ಆದರೆ ನಗರ, ಮಹಾನಗರ ಪ್ರದೇಶಗಳಲ್ಲಿ ಪರಿಸ್ಥಿತಿ ಯಾವ ರೀತಿ ಇದೆ ಎಂಬ ಬಗ್ಗೆ ಗಂಭೀರವಾಗಿ ಚಿಂತಿಸಬೇಕಿದೆ ಎಂದು ಕೆ.ಜಿ.ಬೋಪಯ್ಯ ಅವರು ಒತ್ತಿ ಹೇಳಿದರು.
ಕನ್ನಡ ಭಾಷೆ ಬಗ್ಗೆ ತಾತ್ಸಾರ ಇರಬಾರದು. ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಕನ್ನಡ ಶಾಲೆಗಳ ಪರಿಸ್ಥಿತಿ ಹೇಗಿದೆ ಎಂಬ ಬಗ್ಗೆ ಚಿಂತಿಸಬೇಕಿದೆ ಎಂದರು.
ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷರಾದ ಎಂ.ಪಿ.ಕೇಶವ ಕಾಮತ್ ಅವರು ಮಾತನಾಡಿ ಕನ್ನಡ ಭಾಷೆ, ನಾಡು-ನುಡಿ, ವಿಚಾರಧಾರೆಗಳು ಎಲ್ಲೆಡೆ ತಲುಪಿಸುವ ನಿಟ್ಟಿನಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ಸಹಕಾರಿ ಆಗಿದೆ ಎಂದರು.
ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಟಿ.ಪಿ.ರಮೇಶ್ ಅವರು ಮಾತನಾಡಿ ಕೊಡಗು ಜಿಲ್ಲೆಯಲ್ಲಿ ಕನ್ನಡ ಜೊತೆಗೆ ಕೊಡವ, ಅರೆಭಾಷೆ ಸೇರಿದಂತೆ ಹಲವು ಭಾಷೆಗಳ ಬೆಳವಣಿಗೆಗೆ ಇಲ್ಲಿನ ಸ್ಥಳೀಯರು ಶ್ರಮಿಸಿದ್ದಾರೆ. ಅವರನ್ನು ಸದಾ ಸ್ಮರಿಸಬೇಕಿದ್ದು, ಆ ನಿಟ್ಟಿನಲ್ಲಿ ಯುವಜನರಿಗೆ ಪರಿಚಯಿಸುವ ಕಾರ್ಯ ನಡೆಯುತ್ತಿದೆ ಎಂದು ಹೇಳಿದರು.
ಹರದಾಸ ಅಪ್ಪನೆರವಂಡ ಅಪ್ಪಚ್ಚ ಕವಿ, ನಡಿಕೇರಿಯಂಡ ಚಿಣ್ಣಪ್ಪ, ಸೇರಿದಂತೆ ಹಲವರು ಕನ್ನಡ ಮತ್ತು ಕೊಡವ ಭಾಷೆ ಬೆಳವಣಿಗೆಗೆ ಶ್ರಮಿಸಿದ್ದು, ಸ್ಥಳೀಯ ಭಾಷೆ ಜೊತೆಗೆ ನಾಡುನುಡಿ ಭಾಷೆ ಬೆಳೆಸಬೇಕು ಎಂದರು.
ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ ಅವರು ಮಾತನಾಡಿ ನಾಡಿನಲ್ಲಿ ಕನ್ನಡ ಭಾಷೆಗೆ ಮೊದಲ ಸ್ಥಾನವಿದೆ. ಅದನ್ನು ಉಳಿಸಿಕೊಂಡು ಹೋಗಬೇಕು. ಕನ್ನಡಿಗರಿಗೆ ಉದ್ಯೋಗದಲ್ಲಿ ಆದ್ಯತೆ ನೀಡಬೇಕು. ಕನ್ನಡ ಭಾಷೆಗೆ ಮತ್ತಷ್ಟು ಉತ್ತೇಜನ ನೀಡಬೇಕು ಎಂದರು.
12ನೇ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾದ ಐತಿಚಂಡ ರಮೇಶ್ ಉತ್ತಪ್ಪ ಅವರು ಮಾತನಾಡಿ ಪ್ರಸಕ್ತ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಫಲಿತಾಂಶದಲ್ಲಿ 19 ಸಾವಿರ ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದು, ಇವರಲ್ಲಿ 18,678 ವಿದ್ಯಾರ್ಥಿಗಳು ಪ್ರಥಮ ಭಾಷೆ ಕನ್ನಡ ಭಾಷೆಯಲ್ಲಿಯೇ ಅನುತ್ತೀರ್ಣರಾಗಿರುವ ಬಗ್ಗೆ ಚಿಂತಿಸಬೇಕಿದೆ ಎಂದರು.
ನಮ್ಮದೇ ಭಾಷೆ, ನಮ್ಮದೇ ಉಸಿರಾಗಿರುವ ಕನ್ನಡದಲ್ಲಿ ನಮ್ಮ ಮಕ್ಕಳೇ ಅನುತ್ತೀರ್ಣರಾಗುತ್ತಿದ್ದಾರೆ. ಇದಕ್ಕೊಂದು ಪರಿಹಾರವೇನು ಎಂಬುದನ್ನು ಎಲ್ಲರೂ ಅವಲೋಕನ ಮಾಡಬೇಕಿದೆ ಎಂದರು.
ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರು ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಕುರಿತು ಕಳುಹಿಸಿದ್ದ ಸಂದೇಶವನ್ನು ಬಾಳೆಯಡ ದಿವ್ಯ ಮಂದಪ್ಪ ಅವರು ಓದಿದರು.
ಕಸಾಪ ತಾಲ್ಲೂಕು ನಿಕಟಪೂರ್ವ ಅಧ್ಯಕ್ಷರಾದ ಅಂಬೆಕಲ್ಲು ನವೀನ್, ಕಸಾಪ ಗೌರವ ಕಾರ್ಯದರ್ಶಿ ಮುನೀರ್ ಅಹಮದ್, ರೇವತಿ ರಮೇಶ್, ಕೋಶಾಧಿಕಾರಿ ಸಂಪತ್ ಕುಮಾರ್, ಸಂಘಟನಾ ಕಾರ್ಯದರ್ಶಿ ವಾಸು ರೈ, ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕದ ಅಧ್ಯಕ್ಷರಾದ ಎಸ್.ಡಿ.ವಿಜೇತ್, ರಾಜೇಶ್ ಪದ್ಮನಾಭ, ಹೋಬಳಿ ಘಟಕದ ಅಧ್ಯಕ್ಷರಾದ ನೆರವಂಡ ಉಮೇಶ್, ಈರಮಂಡ ಹರಿಣಿ ವಿಜಯ್, ಎ.ಲೋಕೇಶ್ ಕುಮಾರ್ ಬಿದ್ದಂಡ ನಾಣಿ ದೇವಯ್ಯ , ಕಸಾಪ ತಾಲೋಕು ಅಧ್ಯಕ್ಷರಾದ ಕಡ್ಲೆರ ತುಳಸಿ ಮೋಹನ್ ಮುಂತಾದವರು ಉಪಸ್ಥಿತರಿದ್ದರು.
ವರದಿ: ಪ್ರಿತುನ್ ಪೂವಣ್ಣ




















