ಮಡಿಕೇರಿ: ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆಯಲ್ಲಿ ಪಾರಂಪರಿಕ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವುದು, ಅಮೃತ್ 2.0 ಯೋಜನೆ, ಜಲಜೀವನ್ ಅಭಿಯಾನ, ಸ್ವಚ್ಛ ಭಾರತ ಅಭಿಯಾನ, ವನ್ಯ ಪ್ರಾಣಿಗಳ ಹಾವಳಿ ನಿಯಂತ್ರಣ ಹಾಗೂ ಕೃಷಿ ಚಟುವಟಿಕೆ ಸಂಬಂಧ ಸುದೀರ್ಘ ಚರ್ಚೆ ನಡೆಯಿತು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ದಿಶಾ ಸಮಿತಿ ಸಭೆಯ ಆರಂಭದಲ್ಲಿ ಮಡಿಕೇರಿ ನಗರದ ಪಾರಂಪರಿಕ ತ್ಯಾಜ್ಯ ವೈಜ್ಞಾನಿಕವಾಗಿ ವಿಲೇವಾರಿ ಮಾಡುವ ಸಂಬಂಧ ಈಗಾಗಲೇ ಹಲವು ಬಾರಿ ಚರ್ಚೆ ನಡೆದಿದ್ದು ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವಂತೆ ನಗರಸಭೆ ಪೌರಾಯುಕ್ತರಿಗೆ ಸಂಸದರು ನಿರ್ದೇಶನ ನೀಡಿದರು.
ಮಳೆ ಮತ್ತಿತರ ಕಾರಣ ನೀಡದೆ ಕೆಲಸ ಆಗಬೇಕು. ತ್ಯಾಜ್ಯ ವೈಜ್ಞಾನಿಕವಾಗಿ ವಿಲೇವಾರಿಗೆ ಸಾಕಷ್ಟು ಕಾಲಾವಕಾಶ ನೀಡಲಾಗಿದ್ದು, ಇನ್ನು ಯಾವುದೇ ಕಾರಣ ನೀಡಬಾರದು ಎಂದು ಸಂಸದರು ಸೂಚನೆ ನೀಡಿದರು.
ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವಲ್ಲಿ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿದೆ. ಬೇರೆ ಬೇರೆ ಜಿಲ್ಲೆಯಲ್ಲಿ ಯಾವ ರೀತಿ ತ್ಯಾಜ್ಯ ವಿಲೇವಾರಿ ಮಾಡುತ್ತಾರೆ. ಅದನ್ನು ಸಹ ಗಮನಿಸಿ ಅದರಂತೆ ಕ್ರಮವಹಿಸಬೇಕು ಎಂದರು.
ಇದಕ್ಕೆ ಧ್ವನಿಗೂಡಿಸಿದ ವಿಧಾನಪರಿಷತ್ತು ಸದಸ್ಯರಾದ ಎಸ್.ಎಲ್.ಭೋಜೇಗೌಡ ಹಾಗೂ ಸುಜಾ ಕುಶಾಲಪ್ಪ ಅವರು ಅನುಪಾಲನಾ ವರದಿಯಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ಯಾವುದೇ ಸಬೂಬು ನೀಡುವಂತಿಲ್ಲ ಎಂದು ತಾಕೀತು ಮಾಡಿದರು.
ಈ ಕುರಿತು ಮಾತನಾಡಿದ ವಿಧಾನ ಪರಿಷತ್ತು ಸದಸ್ಯರಾದ ಸುಜಾ ಕುಶಾಲಪ್ಪ ಅವರು ಜಿಲ್ಲೆಯ ಹಲವು ಕಡೆ ರಸ್ತೆ ಬದಿ ಕಸವನ್ನು ಬಿಸಾಡುತ್ತಿದ್ದಾರೆ. ಈ ಬಗ್ಗೆ ಗಮನಹರಿಸಬೇಕು ಎಂದರು.
ಸ್ಥಳೀಯ ಸಂಸ್ಥೆ ವ್ಯಾಪ್ತಿಯ ಎಲ್ಲಾ ವಾರ್ಡ್‌ಗಳಲ್ಲಿ ಕಸ ತ್ಯಾಜ್ಯವನ್ನು ಸಂಗ್ರಹಿಸಿ ವಿಲೇವಾರಿ ಮಾಡಬೇಕು. ಈ ಬಗ್ಗೆ ವಿಶೇಷ ಆಸಕ್ತಿ ವಹಿಸಬೇಕು ಎಂದು ಸಲಹೆ ಮಾಡಿದರು.
ಜಿಲ್ಲೆಯ ಹೋಂ ಸ್ಟೇ ಮತ್ತು ರೆಸಾರ್ಟ್‌ಗಳಲ್ಲಿ ಕಸವನ್ನು ಸಮರ್ಪಕವಾಗಿ ವಿಲೇವಾರಿ ಮಾಡಬೇಕು. ಕೇರಳ ಮತ್ತು ಅಸ್ಸಾಂನಲ್ಲಿ ತ್ಯಾಜ್ಯವನ್ನು ಸರಿಯಾದ ನಿರ್ವಹಣೆ ಮಾಡಲಾಗುತ್ತದೆ. ಆದರೆ ನಮ್ಮ ರಾಜ್ಯದಲ್ಲಿ ಯಥೇಚ್ಛವಾಗಿ ಕಂದಾಯ ಬರುತ್ತಿದ್ದರೂ ಸರಿಯಾದ ನಿರ್ವಹಣೆ ಕಾಣುತ್ತಿಲ್ಲ ಎಂದು ಸುಜಾ ಕುಶಾಲಪ್ಪ ಅವರು ಅತೃಪ್ತಿ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿ.ಪಂ. ಸಿಇಒ ಆನಂದ ಪ್ರಕಾಶ್ ಮೀನಾ ಅವರು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಶೇ. 100 ರಷ್ಟು ಕಸ ವಿಲೇವಾರಿಗೆ ಒತ್ತು ನೀಡಲಾಗಿದೆ. ಅಗತ್ಯವಿರುವ ಕಡೆಗಳಲ್ಲಿ ಡಸ್ಟ್ ಬಿನ್ ಇಡಲಾಗಿದೆ ಎಂದರು.
ವರದಿ : ಪ್ರಿತುನ್ ಪೂವಣ್ಣ



















