
ಕೊರಟಗೆರೆಯಲ್ಲಿ ಕರವೇ ಪ್ರವೀಣ್ ಶೆಟ್ಟಿ ಬಣ ಹಾಗೂ ಕನ್ನಡ ಪರ ಸಂಘಟನೆಗಳಿಂದ ಕಾವೇರಿ ನೀರು ತಮಿಳುನಾಡಿಗೆ ಹರಿ ಬಿಡಬಾರದೆಂದು ಬೃಹತ್ ಪ್ರತಿಭಟನೆ.

ಕೊರಟಗೆರೆ: ಕಾವೇರಿ ನದಿ ನೀರನ್ನು ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಹರಿಸಬಾರದು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಹಾಗೂ ತಾಲೂಕಿನ ವಿವಿಧ ಕನ್ನಡ ಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಸೋಮವಾರ ಕೊರಟಗೆರೆಯಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ಪಟ್ಟಣದ ಎಸ್ಎಸ್ಆರ್ ವೃತ್ತದಿಂದ ತಾಲ್ಲೂಕು ಕಚೇರಿವರೆಗೆ ಕಾಲ್ನಡಿಗೆ ಜಾಥಾ ನಡೆಸಿದ ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ, ಕರ್ನಾಟಕದ ಹಿತಾಸಕ್ತಿಯನ್ನು ಕಾಪಾಡುವಂತೆ ಒತ್ತಾಯಿಸಿದರು. ಬಳಿಕ ತಹಶೀಲ್ದಾರ್ ಮಂಜುನಾಥ್ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕರವೇ ಪ್ರವೀಣ್ ಶೆಟ್ಟಿ ಬಣದ ತಾಲೂಕು ಅಧ್ಯಕ್ಷ ನರಸಿಂಹರಾಜು, ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರಗಳು ಪದೇಪದೇ ಕನ್ನಡಿಗರಿಗೆ ಅನ್ಯಾಯ ಮಾಡುತ್ತಿವೆ. ರಾಜ್ಯದ ರೈತರು ಹಾಗೂ ಜನರ ಕುಡಿಯುವ ನೀರಿನ ಅಗತ್ಯವನ್ನು ಮೊದಲ ಆದ್ಯತೆಯಾಗಿ ಪರಿಗಣಿಸಿ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಹರಿಸಬಾರದು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಕನ್ನಡ ರಕ್ಷಣಾ ವೇದಿಕೆ ತಾಲ್ಲೂಕು ಅಧ್ಯಕ್ಷ ದಿನೇಶ್ ಕುಮಾರ್ ಮಾತನಾಡಿ, ಕಾವೇರಿ ವಿವಾದದಲ್ಲಿ ರಾಜ್ಯ ಸರ್ಕಾರ ದೃಢ ನಿಲುವು ತಾಳಬೇಕು. ಬೆಂಗಳೂರಿನ ಸೇರಿದಂತೆ ರಾಜ್ಯದ ಲಕ್ಷಾಂತರ ಜನರು ಕಾವೇರಿ ನೀರನ್ನೇ ಅವಲಂಬಿಸಿದ್ದಾರೆ. ಆದ್ದರಿಂದ ಕರ್ನಾಟಕದ ಹಿತಾಸಕ್ತಿಗೆ ಧಕ್ಕೆ ಆಗದಂತೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಎಲ್ಲಾ ಕನ್ನಡ ಪರ ಸಂಘಟನೆಗಳು ಬೀದಿಗಿಳಿದು ಹೋರಾಟ ನಡೆಸಲಿವೆ ಎಂದು ಹೇಳಿದರು.
ಕರ್ನಾಟಕ ರಕ್ಷಣಾ ವೇದಿಕೆಯ ಮಹಿಳಾ ಅಧ್ಯಕ್ಷರು ಮಾತನಾಡಿ, ಕಾವೇರಿ ವಿಚಾರದಲ್ಲಿ ಸರ್ಕಾರ ಸ್ಪಷ್ಟ ಹಾಗೂ ಶಾಶ್ವತ ನಿರ್ಧಾರ ಕೈಗೊಳ್ಳಬೇಕು. ರಾಜ್ಯದ ಹಕ್ಕು ರಕ್ಷಿಸುವಲ್ಲಿ ವಿಫಲವಾದರೆ ಮಹಿಳೆಯರೂ ಸಹ ಹೋರಾಟಕ್ಕೆ ಇಳಿಯುವ ಅನಿವಾರ್ಯತೆ ಎದುರಾಗಲಿದೆ ಎಂದು ಎಚ್ಚರಿಸಿದರು.
ಮನವಿ ಸ್ವೀಕರಿಸಿದ ತಹಶೀಲ್ದಾರ್ ಮಂಜುನಾಥ್ ಮಾತನಾಡಿ, ಕೊರಟಗೆರೆ ತಾಲ್ಲೂಕನ್ನು ಬರಪೀಡಿತ ತಾಲ್ಲೂಕು ಎಂದು ಘೋಷಿಸುವ ಸಂಬಂಧ ಈಗಾಗಲೇ ಸರ್ಕಾರದ ಗಮನಕ್ಕೆ ತರಲಾಗಿದೆ. ರೈತರಿಗೆ ಬೆಳೆ ಪರಿಹಾರ ಹಾಗೂ ಜಾನುವಾರುಗಳಿಗೆ ಮೇವಿನ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು. ಪ್ರತಿಭಟನಾಕಾರರು ಸಲ್ಲಿಸಿರುವ ಕಾವೇರಿ ನೀರಿನ ಕುರಿತ ಮನವಿಯನ್ನೂ ಸರ್ಕಾರದ ಗಮನಕ್ಕೆ ತಲುಪಿಸಲಾಗುವುದು ಎಂದು ಭರವಸೆ ನೀಡಿದರು.
ಪ್ರತಿಭಟನೆಯಲ್ಲಿ ನರಸಿಂಹರಾಜು ಅಧ್ಯಕ್ಷರು ಹರೀಶ್ ಬಾಬು ಬಿ ಎಚ್ ಗೌರವಾಧ್ಯಕ್ಷರು ಕೃಷ್ಣಮೂರ್ತಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಟಿ ಆರ್ ಉಪಾಧ್ಯಕ್ಷರು ಪುಟ್ಟರಾಜು ಸಂಘಟ ಕಾರ್ಯದರ್ಶಿ ರಮೇಶ್ ಸಂಘಟನಾ ಕಾರ್ಯದರ್ಶಿ ತೇಜಸ್ ಸಂಚಾಲಕರು ಲೋಕೇಶ್ ಸಂಚಾಲಕರು ವೀರ್ ಕ್ಯಾತಯ್ಯ ಸಂಚಾಲಕರು ಶ್ರೀನಿವಾಸ್ ಸದಸ್ಯರು ಶ್ರೀಧರ್ ಸದಸ್ಯರು ಶಶಿಕುಮಾರ್ ಸದಸ್ಯರು ಯುವ ಘಟಕದ ಉಪಾಧ್ಯಕ್ಷರು ಕೇಶವ್ ಉಪಾಧ್ಯಕ್ಷರು ಮಹಾಲಕ್ಷ್ಮಿ ಜಯಲಕ್ಷ್ಮಿ ಗಂಗಮ್ಮ ನಗರ ಉಪಾಧ್ಯಕ್ಷರು ನರಸಿಂಹಮೂರ್ತಿ ಆಟೋ ರಮೇಶ್, ಪ್ರಚಾರಕರು ಪ್ರಸನ್ನಕುಮಾರ್ . ಎಸ್ ಸೇರಿದಂತೆ
ವಿವಿಧ ಕನ್ನಡ ಪರ ಸಂಘಟನೆಗಳ ಮುಖಂಡರು, ರೈತರು, ಮಹಿಳೆಯರು ಹಾಗೂ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.
ಕೊರಟಗೆರೆ ಪಟ್ಟಣದ ಎಸ್ಎಸ್ಆರ್ ವೃತ್ತದಿಂದ ತಾಲ್ಲೂಕು ಕಚೇರಿವರೆಗೆ ಕರವೇ ಪ್ರವೀಣ್ ಶೆಟ್ಟಿ ಬಣ ಹಾಗೂ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಕಾವೇರಿ ನೀರು ಉಳಿಸುವಂತೆ ಆಗ್ರಹಿಸಿ ಕಾಲ್ನಡಿಗೆ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ವರದಿ. ಪ್ರಸನ್ನ ಕುಮಾರ್. ಎಸ್. ಕೊರಟಗೆರೆ




















