ಬಳ್ಳಾರಿ / ಕಂಪ್ಲಿ: “ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಅಹಿಂಸಾ ಮಾರ್ಗ ಹಾಗೂ ಮಾಜಿ ಪ್ರಧಾನಿ ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಪ್ರಾಮಾಣಿಕತೆ ಮತ್ತು ಸರಳತೆಯ ಜೀವನ ಸಂದೇಶಗಳು ಇಂದಿನ ಸಮಾಜಕ್ಕೆ ಸದಾ ಪ್ರೇರಣಾದಾಯಕವಾಗಿವೆ” ಎಂದು ಕಂಪ್ಲಿ ತಾಲೂಕು ತಹಶೀಲ್ದಾರ್ ಜೂಗಲ್ ಮಂಜುನಾಯಕ ಅವರು ತಿಳಿಸಿದರು.
ಪಟ್ಟಣದ ತಾಲೂಕು ಆಡಳಿತ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಉಭಯ ನಾಯಕರ ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು.
ದೇಶದ ಸ್ವಾತಂತ್ರ್ಯ ಹಾಗೂ ಪ್ರಗತಿಗಾಗಿ ತಮ್ಮ ಇಡೀ ಜೀವನವನ್ನೇ ಮುಡುಪಾಗಿಟ್ಟ ಮಹಾನ್ ಚೇತನಗಳ ತತ್ವಾದರ್ಶಗಳನ್ನು ಪ್ರತಿಯೊಬ್ಬ ಸರ್ಕಾರಿ ಅಧಿಕಾರಿಗಳು, ನೌಕರರು ಹಾಗೂ ಸಾರ್ವಜನಿಕರು ತಮ್ಮ ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.
ಇದೇ ಸಂದರ್ಭದಲ್ಲಿ ಕಚೇರಿಯ ಸಿಬ್ಬಂದಿ ವರ್ಗದವರು ಹಾಗೂ ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದು, ಮಹಾನ್ ನಾಯಕರಿಗೆ ಗೌರವ ಸಲ್ಲಿಸಿದರು.
ವರದಿ : ಜಿಲಾನಸಾಬ್ ಬಡಿಗೇರ್




















