ಮುಂಡಗೋಡ: ಉತ್ತರ ಕನ್ನಡ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿಗಳಾದ ಅಲ್ಲಾಭಕ್ಷ ಅವರು ಶನಿವಾರ ಮುಂಡಗೋಡು ತಾಲೂಕು ಪಂಚಾಯಿತಿ ಕಚೇರಿಗೆ ಭೇಟಿ ನೀಡಿ, ತಾಲೂಕು ಪಂಚಾಯಿತಿಯ ವಿವಿಧ ವಿಭಾಗಗಳ ಕಾರ್ಯನಿರ್ವಹಣೆ ಹಾಗೂ ಅಭಿವೃದ್ಧಿ ಯೋಜನೆಗಳ ಪ್ರಗತಿಯನ್ನು ಸಮಗ್ರವಾಗಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿಯಲ್ಲಿನ ವಿವಿಧ ಕಡತಗಳ ಪರಿಶೀಲನೆ, ಆಡಳಿತಾತ್ಮಕ ಕಾರ್ಯವೈಖರಿ, ವಿವಿಧ ಸರ್ಕಾರಿ ಯೋಜನೆಗಳ ಅನುಷ್ಠಾನ ಹಾಗೂ ಪ್ರಗತಿ ಕುರಿತು ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ವಿವರವಾಗಿ ಚರ್ಚಿಸಿ ಪರಿಶೀಲನೆ ನಡೆಸಿದರು.
ಗ್ರಾಮ ಪಂಚಾಯಿತಿಗಳ ಮಟ್ಟದಲ್ಲಿ ನಡೆಯುತ್ತಿರುವ ಕಾರ್ಯಕ್ರಮಗಳ ಮೇಲ್ವಿಚಾರಣೆ ಹಾಗೂ ಅನುಷ್ಠಾನವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸೂಚಿಸಿದರು. ಘನತ್ಯಾಜ್ಯ ನಿರ್ವಹಣೆ ಹಾಗೂ ಘನತ್ಯಾಜ್ಯ ವಿಲೇವಾರಿ ಘಟಕಗಳ ಕಾರ್ಯನಿರ್ವಹಣೆ, ತ್ಯಾಜ್ಯ ಸಂಗ್ರಹಣೆ, ವಿಂಗಡಣೆ ಹಾಗೂ ವಿಲೇವಾರಿ ವ್ಯವಸ್ಥೆಯ ಕುರಿತು ಪರಿಶೀಲನೆ ನಡೆಸಿದರು.
ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ, ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ ಒದಗಿಸಲಾಗುತ್ತಿರುವ ವಿವಿಧ ಆರೋಗ್ಯ ಸೇವೆಗಳು ಹಾಗೂ ಮೂಲಭೂತ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿದರು. ಆಸ್ಪತ್ರೆಯಲ್ಲಿನ ವ್ಯವಸ್ಥೆಗಳ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಹಾಗೂ ವರದಿ ಪಡೆದುಕೊಂಡು, ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆಗಳು ಸಮರ್ಪಕವಾಗಿ ದೊರೆಯುವಂತೆ ಅಗತ್ಯ ಸಲಹೆ, ಸೂಚನೆ ಹಾಗೂ ಮಾರ್ಗದರ್ಶನ ನೀಡಿದರು.
ನಂತರ ತಾಲೂಕಿನ ಹಾಸ್ಟೆಲ್‌ಗಳಿಗೆ ಭೇಟಿ ನೀಡಿ, ವಿದ್ಯಾರ್ಥಿಗಳಿಗೆ ಒದಗಿಸಲಾಗುತ್ತಿರುವ ಮೂಲಭೂತ ಸೌಲಭ್ಯಗಳು ಹಾಗೂ ಹಾಸ್ಟೆಲ್‌ನಲ್ಲಿನ ವ್ಯವಸ್ಥೆಗಳ ಕುರಿತು ಪರಿಶೀಲನೆ ನಡೆಸಿದರು. ವಸತಿ ವ್ಯವಸ್ಥೆ, ಕುಡಿಯುವ ನೀರು, ಸ್ವಚ್ಛತೆ, ಆಹಾರ ಸೇರಿದಂತೆ ವಿದ್ಯಾರ್ಥಿಗಳಿಗೆ ಲಭ್ಯವಾಗುತ್ತಿರುವ ವಿವಿಧ ಸೌಲಭ್ಯಗಳ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಈ ಸಂದರ್ಭದಲ್ಲಿ ತಾಲೂಕ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ಟಿ ವೈ ದಾಸನಕೊಪ್ಪ, ಸೀಮಾ ನಾಯ್ಕ್, ಪಂಚಾಯತ್ ರಾಜ್ ಇಲಾಖೆಯ ಪ್ರದೀಪ್ ಭಟ್, ವಿಷಯನಿರ್ವಾಹಕ ರಾದ ಶೀತಲ್ ಸೇರಿದಂತೆ ಪಿಡಿಒಗಳು ಹಾಗೂ ಕಚೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.




















