
ಹಿಂದಿನ ತೀರ್ಮಾನಗಳ ಪಾಲನೆಗೆ ಒತ್ತಾಯ – ಕನ್ನಡಪರ ಒಕ್ಕೂಟ ಹಾಗೂ ಸಾರ್ವಜನಿಕರಿಂದ ಹೋರಾಟದ ಚಿಂತನೆ.
ಹೊಳೆಗದ್ದೆ ಟೋಲ್ ಪ್ಲಾಜಾದಲ್ಲಿ ವಾಹನ ಸಂಚಾರ, ಟೋಲ್ ಬ್ಯಾರಿಯರ್ ನಿರ್ವಹಣೆ ಹಾಗೂ ಸ್ಥಳೀಯರ ವಾಹನಗಳಿಗೆ ಸಂಬಂಧಿಸಿದಂತೆ ಹಿಂದಿನ ಸಭೆಯಲ್ಲಿ ಕೈಗೊಂಡಿದ್ದ ತೀರ್ಮಾನಗಳನ್ನು ಸಮರ್ಪಕವಾಗಿ ಪಾಲಿಸಲಾಗುತ್ತಿಲ್ಲ ಎಂಬ ಆಕ್ಷೇಪ ಸ್ಥಳೀಯರಿಂದ ವ್ಯಕ್ತವಾಗಿದೆ.
ಇದರ ನಡುವೆ ಟೋಲ್ ಕಚೇರಿಯಲ್ಲಿರುವ ಅಧಿಕಾರಿಯೊಬ್ಬರು ಸ್ಥಳೀಯರೊಂದಿಗೆ ಹಿಂದಿ ಭಾಷೆಯಲ್ಲಿ ಉತ್ತರಿಸುತ್ತಿರುವುದಕ್ಕೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದು, ಕರ್ನಾಟಕದಲ್ಲಿ ಕಾರ್ಯನಿರ್ವಹಿಸುವಾಗ ಸ್ಥಳೀಯರೊಂದಿಗೆ ಕನ್ನಡದಲ್ಲೇ ಸೇವೆ ಮತ್ತು ಸಂವಹನ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.
ಕನ್ನಡದಲ್ಲಿ ಸೇವೆ ನೀಡುವ ವ್ಯವಸ್ಥೆ ಮಾಡಬೇಕು, ಸ್ಥಳೀಯರ ಸಮಸ್ಯೆಗಳಿಗೆ ಸ್ಪಂದಿಸಬೇಕು ಹಾಗೂ ಹಿಂದಿನ ಸಭೆಯ ತೀರ್ಮಾನಗಳನ್ನು ಜಾರಿಗೊಳಿಸಬೇಕು ಎಂಬುದು ಸ್ಥಳೀಯರ ಪ್ರಮುಖ ಬೇಡಿಕೆಯಾಗಿದೆ.
ಈ ವಿಚಾರದಲ್ಲಿ ಸಂಬಂಧಿಸಿದ ಅಧಿಕಾರಿಗಳು ಹಾಗೂ ಟೋಲ್ ನಿರ್ವಹಣಾ ಸಂಸ್ಥೆ ಸೂಕ್ತ ಕ್ರಮ ಕೈಗೊಳ್ಳದಿದ್ದರೆ, ಕನ್ನಡಪರ ಒಕ್ಕೂಟಗಳು ಹಾಗೂ ಸಾರ್ವಜನಿಕರ ನೇತೃತ್ವದಲ್ಲಿ ಹೋರಾಟ ನಡೆಸುವ ಕುರಿತು ಚಿಂತನೆ ನಡೆಯುತ್ತಿದೆ.
ಮುಂದಿನ ದಿನಗಳಲ್ಲಿ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ, ಅಗತ್ಯವಿದ್ದಲ್ಲಿ ಶಾಂತಿಯುತ ಪ್ರತಿಭಟನೆ ಹಾಗೂ ಹೋರಾಟದ ರೂಪುರೇಷೆ ಸಿದ್ಧಪಡಿಸಲಾಗುವುದು ಎಂದು ಸ್ಥಳೀಯರು ತಿಳಿಸಿದ್ದಾರೆ.
ಕನ್ನಡ ನಾಡಿನಲ್ಲಿ ಕನ್ನಡಿಗರಿಗೆ ಕನ್ನಡದಲ್ಲೇ ಸೇವೆ ಸಿಗಬೇಕು, ಸ್ಥಳೀಯರ ಹಕ್ಕು ಮತ್ತು ಗೌರವಕ್ಕೆ ಧಕ್ಕೆ ಬಾರದಂತೆ ಆಡಳಿತ ನಡೆಯಬೇಕು ಎಂಬುದು ಸಾರ್ವಜನಿಕರ ಒತ್ತಾಯ.
ವರದಿ: ವಿನಾಯಕ ಆಚಾರಿ ಹೊನ್ನಾವರ




















