ಕಂಪ್ಲಿ: “ಡಾ. ಬಿ.ಆರ್. ಅಂಬೇಡ್ಕರ್ ಅವರ ಚಿಂತನೆಗಳು ಕೇವಲ ಒಂದು ವರ್ಗಕ್ಕೆ ಸೀಮಿತವಲ್ಲ; ಅವು ಸರ್ವಕಾಲಿಕ ಹಾಗೂ ಸಾರ್ವತ್ರಿಕವಾಗಿವೆ. ಪ್ರಸ್ತುತ ದಿನಮಾನಗಳಲ್ಲಿ ಸಮಾಜದ ಅಸಮಾನತೆ ಹೋಗಲಾಡಿಸಲು ಅಂಬೇಡ್ಕರ್ ಅವರ ತತ್ವಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು” ಎಂದು ಸ್ಥಳೀಯ ಶಾಮಿಯಾಚಂದ್ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಸಿದ್ದಣ್ಣ ಪರಮೇಶ್ವರ ಅಭಿಪ್ರಾಯಪಟ್ಟರು.
ಪಟ್ಟಣದಲ್ಲಿ ಆಯೋಜಿಸಿದ್ದ ‘ಪ್ರಸ್ತುತ ದಿನಮಾನಗಳಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಚಿಂತನೆಗಳು’ ಕುರಿತ ಕ. ಸಾ. ಪ, ವತಿಯಿಂದ ಹಮ್ಮಿಕೊಂಡ ತಾಲೂಕು ದ್ವಿತೀಯ ಕನ್ನಡ ಸಾಹಿತ್ಯ ಸಮ್ಮೇಳನದ ವಿಚಾರ ಗೋಷ್ಠಿಯಲ್ಲಿ (ಗೋಷ್ಠಿ-2) ವಿಷಯ ಮಂಡನೆ ಮಾಡಿ ಅವರು ಮಾತನಾಡಿದರು.
“ಸಂವಿಧಾನದ ಆಶಯಗಳಾದ ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಯುವಪೀಳಿಗೆ ಸರಿಯಾಗಿ ಅರ್ಥೈಸಿಕೊಳ್ಳಬೇಕು. ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಮೂಲಕವೇ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯವಿದೆ. ಪ್ರಸ್ತುತ ಸಂದರ್ಭದಲ್ಲಿ ಅಂಬೇಡ್ಕರ್ ಅವರ ಆರ್ಥಿಕ ಹಾಗೂ ಸಾಮಾಜಿಕ ಚಿಂತನೆಗಳ ಅಧ್ಯಯನ ಅತ್ಯಗತ್ಯವಾಗಿದೆ” ಎಂದು ಅವರು ಪ್ರತಿಪಾದಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ
ವಹಿಸಿದ್ದ ದಿಶಾ ರಾಜ್ಯ ಸಮಿತಿ ಸದಸ್ಯ ಡಾ. ಎ. ಸಿ. ದಾನಪ್ಪ ಮಾತನಾಡಿ, ಅಂಬೇಡ್ಕರ್ ಅವರ ವಿಚಾರಗಳನ್ನು ಯುವಜನತೆಗೆ ತಲುಪಿಸುವ ಇಂತಹ ಗೋಷ್ಠಿಗಳು ನಿರಂತರವಾಗಿ ನಡೆಯಬೇಕು ಎಂದರು.
ಗೋಷ್ಠಿಯಲ್ಲಿ ಸಮ್ಮೇಳನಾಧ್ಯಕ್ಷ ಬಂಗಿ ದೊಡ್ಡ ಮಂಜುನಾಥ, ರಾಮಸಾಗರ ಸರ್ಕಾರಿ ಪ್ರೌಢಶಾಲೆ ಶಿಕ್ಷಕ ಸುಗ್ಗೇನಹಳ್ಳಿ ರಮೇಶ್, ನಿವೃತ್ತ ಶಿಕ್ಷಕ ಚನ್ನಬಸಪ್ಪ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ತಾಲ್ಲೂಕು ಅಧ್ಯಕ್ಷ ಯಲಗಾರ ವೆಂಕಟರೆಡ್ಡಿ ಹಾಗೂ ರಜಪೂತ ಸಮಾಜದ ಅಧ್ಯಕ್ಷ ಕೆ. ಇಂದ್ರಜಿತ್ ಸಿಂಗ್ ಉಪಸ್ಥಿತರಿದ್ದರು.
ವರದಿ : ಜಿಲಾನಸಾಬ್ ಬಡಿಗೇರ್




















