ಕಂಪ್ಲಿ : ತಾಲ್ಲೂಕಿನ ದೇವಸಮುದ್ರ ಗ್ರಾಮದಲ್ಲಿ ಯಾವುದೇ ಪರವಾನಗಿ ಇಲ್ಲದೆ ರಾಜಾರೋಷವಾಗಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟವನ್ನು ತಕ್ಷಣವೇ ತಡೆಗಟ್ಟುವಂತೆ ಒತ್ತಾಯಿಸಿ ಗ್ರಾಮಸ್ಥರು ದೂರು ನೀಡಿದ್ದು, ಈ ಕುರಿತು ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಶಶಿಕಾಂತ ಕೆ. ಎಚ್. ರವರು ಕಂಪ್ಲಿ ವಲಯದ ಅಬಕಾರಿ ನಿರೀಕ್ಷಕರಿಗೆ ಪತ್ರ ಬರೆದಿದ್ದಾರೆ.
ಗ್ರಾಮದ ವಿವಿಧೆಡೆ ಅಧಿಕೃತ ಪರವಾನಗಿ ಪಡೆಯದೆ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆ. ಇದರಿಂದ ಸಾರ್ವಜನಿಕ ಸ್ಥಳಗಳಲ್ಲಿಯೇ ಕುಡುಕರ ಹಾವಳಿ ಮಿತಿಮೀರಿದ್ದು, ನಿತ್ಯ ಗಲಾಟೆ ಹಾಗೂ ಇತರೆ ಅಹಿತಕರ ಘಟನೆಗಳು ನಡೆಯುವ ಆತಂಕ ಎದುರಾಗಿದೆ. ವಿಶೇಷವಾಗಿ ಶಾಲಾ-ಕಾಲೇಜುಗಳಿಗೆ ತೆರಳುವ ಯುವಕರು ಮತ್ತು ಓಡಾಡುವ ಮಹಿಳೆಯರಿಗೆ ಇದರಿಂದ ತೀವ್ರ ತೊಂದರೆಯಾಗುತ್ತಿದೆ ಎಂದು ಗ್ರಾಮಸ್ಥರು ಮಹಾತ್ಮ ಗಾಂಧಿ ದೇವಸಮುದ್ರ ಗ್ರಾಮ ಪಂಚಾಯಿತಿಗೆ ಸಲ್ಲಿಸಿದ ದೂರಿನಲ್ಲಿ ತಮ್ಮ ಅಳಲು ತೋಡಿಕೊಂಡಿದ್ದಾರೆ.
ಸಾರ್ವಜನಿಕರ ದೂರನ್ನು ಗಂಭೀರವಾಗಿ ಪರಿಗಣಿಸಿರುವ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ನಡೆಯುತ್ತಿರುವ ಸ್ಥಳಗಳನ್ನು ತಕ್ಷಣ ಪರಿಶೀಲಿಸಿ, ಕಾನೂನುಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕುವಂತೆ ಅಬಕಾರಿ ಇಲಾಖೆಗೆ ಅಧಿಕೃತ ಪತ್ರ ರವಾನಿಸಿದ್ದಾರೆ.
ಕಂಪ್ಲಿ ವಲಯ ಅಬಕಾರಿ ನಿರೀಕ್ಷಕರ ಕಚೇರಿಗೆ ತಲುಪಿದ್ದು, ಅಬಕಾರಿ ಅಧಿಕಾರಿಗಳು ಯಾವಾಗ ದಾಳಿ ನಡೆಸಿ ಅಕ್ರಮ ಮಾರಾಟಗಾರರ ವಿರುದ್ಧ ಕ್ರಮ ಕೈಗೊಳ್ಳಲಿದ್ದಾರೆ ಎಂಬುದರತ್ತ ಗ್ರಾಮಸ್ಥರು ಎದುರು ನೋಡುತ್ತಿದ್ದಾರೆ.
ವರದಿ : ಜಿಲಾನಸಾಬ್ ಬಡಿಗೇರ್




















