ಸಿರುಗುಪ್ಪ : ತಾಲೂಕಿನ ತೆಕ್ಕಲಕೋಟೆ ಪಟ್ಟಣದ 13ನೇ ವಾರ್ಡ್ ನಿವಾಸಿ ಎಸ್. ಹನುಮಂತಪ್ಪ (37) ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳ ತಂಡ ಸೋಮವಾರ ಸಂಜೆ ಮೃತನ ಮನೆಗೆ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿತು.
ಬಳ್ಳಾರಿ ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ಉಪನಿರ್ದೇಶಕ ಚಿದಾನಂದಪ್ಪ ಮಾತನಾಡಿ, ಮೃತನ ಕುಟುಂಬಕ್ಕೆ ಸರ್ಕಾರದ ಅರ್ಹ ಯೋಜನೆಗಳ ಸೌಲಭ್ಯ ಒದಗಿಸುವುದರ ಜತೆಗೆ ಮಕ್ಕಳ ವಿದ್ಯಾಭ್ಯಾಸಕ್ಕೆ ಅಗತ್ಯ ನೆರವು ನೀಡಲಾಗುವುದು ಎಂದು ಭರವಸೆ ನೀಡಿದರು.
ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಶಾಷು ಮಾತನಾಡಿ, ಇಲಾಖೆಯ ನಿಯಮಾನುಸಾರ ಕುಟುಂಬಕ್ಕೆ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದರು.
ಈ ವೇಳೆ ಸಮುದಾಯದ ಮುಖಂಡ ನರೇಂದ್ರ ಸಿಂಹ ಮಾತನಾಡಿ, ಮೃತನ ಕುಟುಂಬಕ್ಕೆ ತ್ವರಿತ ನ್ಯಾಯ ಒದಗಿಸಬೇಕು. ಮಕ್ಕಳ ಶಿಕ್ಷಣದ ಜವಾಬ್ದಾರಿ ವಹಿಸಿಕೊಳ್ಳುವುದರ ಜತೆಗೆ ಪತ್ನಿಗೆ ಖಾಯಂ ಸರ್ಕಾರಿ ಉದ್ಯೋಗ ನೀಡಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಸಿರುಗುಪ್ಪ ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿ ಮಡಗಿನ ಬಸಪ್ಪ, ಉಪತಹಶೀಲ್ದಾರ್ ಸಿದ್ಧಾರ್ಥ ಕಾರಂಜಿ, ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಮಡ್ಡೇರು ಸಿದ್ದಯ್ಯ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ರಾಘವೇಂದ್ರ, ತಾಲ್ಲೂಕು ಪಂಚಾಯಿತಿ ಯೋಜನಾಧಿಕಾರಿ ರಮೇಶ್, ಪಿಎಸ್ಐ ರೇವಣಸಿದ್ದಪ್ಪ, ಗ್ರಾಮ ಆಡಳಿತಾಧಿಕಾರಿ ಶಿವರಾಜ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ : ಮಸೀದಿ,ಅಬ್ದುಲ್ ಗೌಸ್, ಸಿರುಗುಪ್ಪ




















