
ತಾಲ್ಲೂಕು ಕಚೇರಿ ಆವರಣದಲ್ಲೇ ಸ್ವಚ್ಛತೆ ಮರೀಚಿಕೆ – ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರ ಒತ್ತಾಯ
ತಾಲ್ಲೂಕು ಕಚೇರಿ ಪಕ್ಕದಲ್ಲಿರುವ ಸಾರ್ವಜನಿಕ ಶೌಚಾಲಯ ಸೂಕ್ತ ನಿರ್ವಹಣೆ ಇಲ್ಲದೆ ಸಂಪೂರ್ಣ ಅವ್ಯವಸ್ಥೆಯ ಆಗರವಾಗಿದ್ದು, ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುವಂತಾಗಿದೆ.
ಪ್ರತಿದಿನ ನೂರಾರು ಸಂಖ್ಯೆಯಲ್ಲಿ ಸಾರ್ವಜನಿಕರು ತಮ್ಮ ವಿವಿಧ ಸರ್ಕಾರಿ ಕೆಲಸಗಳಿಗಾಗಿ ತಾಲೂಕು ಕಚೇರಿಗೆ ಆಗಮಿಸುತ್ತಾರೆ. ರೈತರು, ಮಹಿಳೆಯರು, ವೃದ್ಧರು ಸೇರಿದಂತೆ ವಿವಿಧ ವರ್ಗದ ಜನರು ತಾಲೂಕು ಕಚೇರಿಗೆ ಭೇಟಿ ನೀಡುತ್ತಾರೆ. ಆದರೆ ಕಚೇರಿ ಪಕ್ಕದಲ್ಲಿರುವ ಸಾರ್ವಜನಿಕ ಶೌಚಾಲಯದ ಸ್ವಚ್ಛತೆ ಮತ್ತು ನಿರ್ವಹಣೆಯ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಶೌಚಾಲಯದಲ್ಲಿ ಸ್ವಚ್ಛತೆ ಇಲ್ಲದೆ ಗೊಬ್ಬು ವಾಸನೆ ಹರಡುತ್ತಿದ್ದು, ಸುತ್ತಮುತ್ತಲಿನ ಪ್ರದೇಶದಲ್ಲಿ ನಿಲ್ಲುವುದೇ ಕಷ್ಟಕರವಾಗಿದೆ. ಇದರಿಂದ ತಾಲೂಕು ಕಚೇರಿಗೆ ಬರುವ ಸಾರ್ವಜನಿಕರು ಹಾಗೂ ಕಚೇರಿ ಸುತ್ತಮುತ್ತಲಿನ ಜನರು ತೀವ್ರ ಮುಜುಗರ ಮತ್ತು ಆರೋಗ್ಯದ ಆತಂಕ ಎದುರಿಸುವಂತಾಗಿದೆ.
ಸರ್ಕಾರಿ ಕಚೇರಿಗಳಲ್ಲಿ ಸ್ವಚ್ಛತೆ ಕಾಪಾಡಬೇಕು, ಸಾರ್ವಜನಿಕರಿಗೆ ಮೂಲಭೂತ ಸೌಕರ್ಯ ಒದಗಿಸಬೇಕು ಎಂದು ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದರೂ, ತಾಲ್ಲೂಕು ಕಚೇರಿಯಂತಹ ಪ್ರಮುಖ ಸ್ಥಳದಲ್ಲಿಯೇ ಸಾರ್ವಜನಿಕ ಶೌಚಾಲಯದ ದುಸ್ಥಿತಿ ಮುಂದುವರಿದಿರುವುದು ವಿಪರ್ಯಾಸದ ಸಂಗತಿಯಾಗಿದೆ.
ಅಧಿಕಾರಿಗಳು ಗಮನಹರಿಸಿ :
ಸಂಬಂಧಪಟ್ಟ ತಾಲೂಕು ಆಡಳಿತ ಹಾಗೂ ಪುರಸಭೆಯ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಶೌಚಾಲಯವನ್ನು ಸ್ವಚ್ಛಗೊಳಿಸಬೇಕು. ನಿಯಮಿತವಾಗಿ ಸ್ವಚ್ಛತಾ ಸಿಬ್ಬಂದಿಯನ್ನು ನೇಮಿಸಿ, ನೀರು ಮತ್ತು ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕು. ಜೊತೆಗೆ ಶೌಚಾಲಯದ ನಿರ್ವಹಣೆಗೆ ಶಾಶ್ವತ ವ್ಯವಸ್ಥೆ ರೂಪಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಜನಸಾಮಾನ್ಯರ ಅನುಕೂಲಕ್ಕಾಗಿ ನಿರ್ಮಿಸಿರುವ ಸಾರ್ವಜನಿಕ ಶೌಚಾಲಯವೇ ದುರ್ವಾಸನೆಯ ತಾಣವಾಗಿರುವುದು ಆಡಳಿತ ವ್ಯವಸ್ಥೆಯ ಕಾರ್ಯವೈಖರಿಗೆ ಹಿಡಿದ ಕನ್ನಡಿಯಂತಾಗಿದೆ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ್ಯ ತೊರೆದು ಸಾರ್ವಜನಿಕರ ಆರೋಗ್ಯ ಮತ್ತು ಸ್ವಚ್ಛತೆಗೆ ಆದ್ಯತೆ ನೀಡುವರೇ ಎಂಬುದನ್ನು ಕಾದು ನೋಡಬೇಕಿದೆ…
ವರದಿ.ಪ್ರಸನ್ನಕುಮಾರ್. ಎಸ್. ಕೊರಟಗೆರೆ




















