ಯಾದಗಿರಿ:ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ 2023 ರ ಮೇ10 ರಂದು ಮತದಾನ ನಡೆಯಲಿದ್ದು, ಮತದಾನ ಮುಕ್ತಾಯಗೊಳ್ಳುವ ಅವಧಿಯ 48 ಗಂಟೆಗಳ ಪೂರ್ವದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಹಾಗೂ ಮತದಾನ ಸುಗಮವಾಗಿ ಮತ್ತು ಮುಕ್ತವಾಗಿ ನಡೆಯುವ ಹಿತದೃಷ್ಟಿಯಿಂದ ದಂಡ ಪ್ರಕ್ರಿಯಾ ನೀತಿ ಸಂಹಿತೆ 1973 ಕಲಾಂ 144 ರ ಪ್ರತಿಬಂಧಕಾಜ್ಞೆ ವಿಧಿ ಜಾರಿಗೊಳಿಸಿ ಮಾನ್ಯ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
ಸಾರ್ವತ್ರಿಕ ಚುನಾವಣೆ 2023 ರ ನಿಮಿತ್ಯ ಮೇ 8 ರಿಂದ ಸಂಜೆ 6 ಗಂಟೆಯಿಂದ ಪ್ರಾರಂಭಿಸಿ 2023 ಮೇ 10 ರಂದು ಮತದಾನ ಮುಕ್ತಾಯವಾಗುವವರೆಗೆ ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಾಂ 144 ರ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಈ ಕೆಳಗೆ ಕಾಣಿಸಿದ ಷರತ್ತುಗಳನ್ನು ವಿಧಿಸಿ ಪ್ರತಿಬಂಧಕಾಜ್ಞೆಯನ್ನು ಜಾರಿ ಮಾಡಿ ಆದೇಶಿಸಿದ್ದಾರೆ.
ಯಾದಗಿರಿ ಜಿಲ್ಲೆ ವ್ಯಾಪ್ತಿಯಲ್ಲಿ 5 ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ ಸಮಾರಂಭಗಳನ್ನು ನಿಷೇಧಿಸಲಾಗಿದೆ. ಚುನಾವಣೆ ಅಭ್ಯರ್ಥಿ ಮತ್ತು ಬೆಂಬಲಿಗರು ಸೇರಿ 5 ಜನರಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರತಕ್ಕದ್ದಲ್ಲ .ಬಡಿಗೆ, ಬರ್ಚಿ, ಗದೆ, ಬಂದೂಕ, ಚೂರಿ, ಚಾಕು, ಅಥವಾ ದೇಹಕ್ಕೆ ಅಪಾಯ ಉಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರ ತೆಗೆದುಕೊಂಡು ಹೋಗುವುದು ಮತ್ತು ಅವುಗಳೊಂದಿಗೆ ಬೀದಿಯಲ್ಲಿ ತಿರುಗಾಡುವುದನ್ನು ನಿಷೇಧಿಸಲಾಗಿದೆ.
ಮತಗಟ್ಟೆಯಲ್ಲಿ 100 ಮೀಟರ್ ಒಳಗೆ ಚುನಾವಣೆ ಪ್ರಚಾರ ನಿಷೇಧಿಸಿದೆ, ಈ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಬುಕ್ ಸ್ಟಾಲ್, ಸೈಬರ್ ಕೆಫೆ, ಝೆರಾಕ್ಸ್ ಅಂಗಡಿಗಳನ್ನು ನಿರ್ಬಧಿಸಿದೆ, ಕಲ್ಲುಗಳು, ಸ್ಪೋಟಕ ವಸ್ತುಗಳು ಯಾವುದೇ ವಸ್ತುಗಳು ಇತ್ಯಾದಿಗಳನ್ನು ಸದರಿ ಸ್ಥಳಕ್ಕೆ ತಗೆದುಕೊಂಡು ಹೊಗುವುದು ನಿಷೇಧಿಸಲಾಗಿದೆ.
ಕಲ್ಲುಗಳನ್ನು, ವಸ್ತುಗಳನ್ನು ಎಸೆಯುವ ಅಥವಾ ಬಿಡುವ ಸಾಧಾನಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ.
ಸದರಿ ಸ್ಥಳದಲ್ಲಿ ಬಹಿರಂಗವಾಗಿ ಘೋಷಣೆ ಮಾಡುವುದು ಪದ ಹಾಡುವುದು ವಾದ್ಯ ಬಾರಿಸುವುದು ವ್ಯಾಖ್ಯಾನ ಕೊಡುವುದು, ಸನ್ನೆ ಅಥವಾ ನಕಲಿ ಪ್ರದರ್ಶನ ಹಾಗೂ ಸಾರ್ವಜನಿಕ ಸಭ್ಯತೆ ಅಥವಾ ನೀತಿಯನ್ನು ಆಕ್ರಮಿಸಬಹುದಾದ ಕೃತ್ಯಗಳನ್ನು ಮಾಡುವುದನ್ನು ನಿಷೇಧಿಸಲಾಗಿದೆ.
ಈ ಆದೇಶ ಉಲ್ಲಂಘಿಸುವವರ ವಿರುದ್ಧ ಸಂಹಿತೆಯ 188 ರ ಪ್ರಕಾರ ಕ್ರಮವನ್ನು ಜರುಗಿಸಲಾಗುವುದು ಈ ಆದೇಶವು ಮತದಾನ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ, ಪೋಲಿಸ್ ಅಧಿಕಾರಿಗಳಿಗೆ ಹಾಗೂ ಚುನಾವಣೆ ಕಾರ್ಯನಿರತ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ಹಾಗೂ ಒಬ್ಬೊಬ್ಬರಾಗಿ ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡುವ ಮತದಾರರಿಗೆ ಅನ್ವಯಿಸುವುದಿಲ್ಲ.
ಜಿಲ್ಲಾ ಪೋಲಿಸ್ ಅಧೀಕ್ಷಕರು, ಯಾದಗಿರಿ ಇವರು ಈ ಆದೇಶವನ್ನು ಪರಿಣಾಮಕಾರಿಯಾಗಿ ಜಾರಿಗೆ ಬರುವಂತೆ ಕ್ರಮ ಕೈಗೊಳ್ಳಬೇಕೆಂದು ಆದೇಶಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ ರಾಜಶೇಖರ ಮಾಲಿ ಪಾಟೀಲ್ ಶಹಾಪುರ