ಭದ್ರಾವತಿ: ಬೆಲೆ ಬಾಳುವ ಉತ್ತಮ ಗುಣಮಟ್ಟದ ಕಬ್ಬಿಣದ ವಸ್ತುಗಳನ್ನು ಅತ್ಯಂತ ಕಡಿಮೆ ದರಕ್ಕೆ ಸ್ಕ್ರಾಪ್ ಗೆ ಮಾರಾಟ ಮಾಡಲು ಹುನ್ನಾರ ನಡೆಸುತ್ತಿರುವ ವಿ ಐ ಎಸ್ ಎಲ್ ಆಡಳಿತ ಮಂಡಳಿ ವಿರುದ್ಧ ಕಾರ್ಖಾನೆಯ ಗುತ್ತಿಗೆ ಕಾರ್ಮಿಕರ ಸಂಘದ ವತಿಯಿಂದ ಕಾರ್ಖಾನೆಯ ಮುಖ್ಯದ್ವಾರದ ಒಳಗೆ ದಿಢೀರ್ ಪ್ರತಿಭಟನೆ ನಡೆಸಿ ತೀವ್ರ ಆಕ್ರೋಶ ವ್ಯಕ್ತಪಡಿಸಲಾಯಿತು. ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯಲ್ಲಿ ದಿನ ಕಳೆದಂತೆ ಒಂದೊಂದು ಘಟಕಗಳು ಉತ್ಪಾದನೆ ಸ್ಥಗಿತಗೊಳ್ಳುತ್ತಿದ್ದು, ಗುರುವಾರ ಗುತ್ತಿಗೆ ಕಾರ್ಮಿಕ ಸಂಘಟನೆಗಳು ಕಾರ್ಖಾನೆ ಮುಂಭಾಗ ಪ್ರತಿಭಟನೆ ನಡೆಸಿದವು.
ಕಳೆದ 3 ದಿನಗಳ ಹಿಂದೆ ಶಾಸಕ ಬಿ.ಕೆ ಸಂಗಮೇಶ್ವರ್ ವಿ ಐ ಎಸ್ ಎಲ್ ಕಾರ್ಖಾನೆ ಆಡಳಿತ ಮಂಡಳಿ ಜೊತೆಗೆ ಚರ್ಚಿಸಿ ಉತ್ಪಾದನೆ ಸ್ಥಗಿತಗೊಳಿಸದೆ, ಗುತ್ತಿಗೆ ಕಾರ್ಮಿಕರ ಹಿತಕಾಪಾಡುವಂತೆ ಆಗ್ರಹಿಸಿದ್ದರು.
ಆದರೆ ಆಡಳಿತ ಮಂಡಳಿ ಅಸಹಾಯಕತೆ ವ್ಯಕ್ತಪಡಿಸಿದ್ದು, ಮೇಲಾಧಿಕಾರಿಗಳು ಈಗಾಗಲೇ ಉತ್ಪಾದನೆ ಸ್ಥಗಿತಗೊಳಿಸುವಂತೆ ಆದೇಶಿಸಿದ್ದಾರೆ. ಅಲ್ಲದೆ ಕಚ್ಚಾ ಸಾಮಾಗ್ರಿಗಳು ಸಹ ಸ್ಥಗಿತಗೊಂಡಿದ್ದು, ಈ ಹಿನ್ನಲೆಯಲ್ಲಿ ಉತ್ಪಾದನೆ ಮುಂದುವರೆಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ. ಈ ಹಿನ್ನಲೆಯಲ್ಲಿ ಗುತ್ತಿಗೆ ಕಾರ್ಮಿಕರು ಕಾರ್ಖಾನೆ ಮುಂಭಾಗ ಮಳೆಯಲ್ಲಿಯೇ ಪ್ರತಿಭಟನೆ ಮುಂದುವರೆಸಿದರು. ಈ ನಡುವೆ ಗುತ್ತಿಗೆ ಕಾರ್ಮಿಕರ ಅನಿರ್ಧಷ್ಟವಾಧಿ ಹೋರಾಟ 165ನೇ ದಿನಕ್ಕೆ ತಲುಪಿದ್ದು, ಪ್ರತಿಭಟನೆ ತೀವ್ರಗೊಳ್ಳುತ್ತಿದೆ.
ವಿ ಐ ಎಸ್ ಎಲ್ ಗುತ್ತಿಗೆ ಕಾರ್ಮಿಕರ ಸಂಘದ ಅಧ್ಯಕ್ಷ ಹೆಚ್ ಜಿ ಸುರೇಶ್, ಉಪಾಧ್ಯಕ್ಷ ವಿನೋದ್ ಕುಮಾರ್, ಪ್ರಧಾನ ಕಾರ್ಯದರ್ಶಿ ರಾಕೇಶ್, ತ್ರಿವೇಣಿ ರವರ ನೇತೃತ್ವದಲ್ಲಿ ನೂರಾರು ಗುತ್ತಿಗೆ ಕಾರ್ಮಿಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಬಿಜೆಪಿ ಮುಖಂಡ ಮಂಗೋಟೆ ರುದ್ರೇಶ್ ಗುತ್ತಿಗೆ ಕಾರ್ಮಿಕರನ್ನು ಬೆಂಬಲಿಸಿ ಅಧಿಕಾರಿಗಳೊಂದಿಗೆ ಚರ್ಚಿಸಿದರು. ಕಾರ್ಯಪಾಲಕ ನಿರ್ದೇಶಕ ಚಾಂದ್ ವಾನಿ ಹಾಗೂ ಸಾರ್ವಜನಿಕ ಸಂಪರ್ಕ ಅಧಿಕಾರಿ ಪ್ರವೀಣ್ ಕುಮಾರ್ ಉಪಸ್ಥಿತರಿದ್ದರು.