ರಾಜ್ಯದ ಪ್ರತಿ ಶಾಲೆ ಹಾಗೂ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಏಕಾಗ್ರತೆ ಹೆಚ್ಚಿಸಲು, ಆರೋಗ್ಯ ವೃದ್ಧಿಪಡಿಸಲು ಹಾಗೂ ಮಾನಸಿಕ ಒತ್ತಡದಿಂದ ಮುಕ್ತರಾಗಲು ಪ್ರತಿದಿನ ಶಾಲೆ ಪ್ರಾರಂಭಕೂ ಮುನ್ನ ಕನಿಷ್ಠ 10 ನಿಮಿಷ ಕಡ್ಡಾಯವಾಗಿ ವಿದ್ಯಾರ್ಥಿಗಳಿಗೆ ಧ್ಯಾನ ಮಾಡಿಸಲು ಶಿಕ್ಷಣ ಸಚಿವ ಬಿ ಸಿ ನಾಗೇಶ್ ನಿರ್ಧರಿಸಿದ್ದು, ಈ ಬಗ್ಗೆ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಶಿಫಾರಸು ಮಾಡಿದ್ದಾರೆ.
ಈ ಬಗ್ಗೆ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ಶಿಕ್ಷಣ ಸಚಿವ ಬಿಸಿ ನಾಗೇಶ್ ಧ್ಯಾನ ಮಾಡುವ ಸಂಬಂಧ ತೀರ್ಮಾನ ಕೈಗೊಳ್ಳಲು ಸೂಚಿಸಿದ್ದಾರೆ.
ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಣ ಸಂಘದವರು ಶಾಲಾ ಕಾಲೇಜುಗಳಲ್ಲಿ ಧ್ಯಾನ ಮಾಡಿಸುವಂತೆ ಶಿಕ್ಷಣ ಸಚಿವರಿಗೆ ಪತ್ರ ಬರೆದಿದ್ದರು, ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಸಚಿವರು ಈ ಮನವಿಗೆ ಸ್ಪಂದಿಸಿದ್ದಾರೆ.
ಸಚಿವರ ಶಿಫಾರಸಿನ ಮೇರೆಗೆ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಆದೇಶ ಹೊರಡಿಸಲಿದ್ದು ಶೀಘ್ರವೇ ಶಾಲೆಗಳಲ್ಲಿ ಧ್ಯಾನ ಮಾಡುವ ಆದೇಶ ಅಧಿಕೃತ ವಾಗಲಿದೆ.